January17, 2026
Saturday, January 17, 2026
spot_img

ಬೆಂಗಳೂರಿನ ಅಭಿವೃದ್ಧಿ ಯೋಜನೆಗಳಿಗೆ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು, ರಾಜ್ಯ ರಾಜಧಾನಿಗೆ ಅಗತ್ಯವಾಗಿರುವ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದರು.

ಬೆಂಗಳೂರು ದೇಶದ ಮಹಾನಗರಗಳಲ್ಲಿ ಒಂದಾಗಿದ್ದು, ಇಲ್ಲಿ ಅನೇಕ ನಗರಾಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಬಾಕಿ ಉಳಿದಿರುವ ಅನುಮತಿ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮೆಟ್ರೋ 2ನೇ ಹಂತದ ಯೋಜನೆ ಪೂರ್ಣಗೊಳಿಸುವ ಪರಿಷ್ಕೃತ ವೆಚ್ಚ 26,405 ಕೋಟಿ ರೂ.ನಿಂದ 40,425 ಕೋಟಿ ರೂ.ವರೆಗೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ 2025ರ ಜೂನ್ 5ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು ಕೇಂದ್ರ ಸಚಿವಾಲಯಕ್ಕೆ 2025 ಜೂನ್ 9ರಂದು ಕಳುಹಿಸಲಾಗಿದ್ದು, ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಬೇಕು ಎಂದು ಹೇಳಿದ್ದಾರೆ.

ಮೆಟ್ರೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು 28,405 ಕೋಟಿ ರೂ. ಅಂದಾಜು ಮಾಡಲಾಗಿದೆ. ಈ ಯೋಜನೆಗೆ 2025 ಜನವರಿ 10ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದ್ದು, 2025 ಜನವರಿ 15ರಂದು ಕೇಂದ್ರ ಸಚಿವಾಲಯದ ಒಪ್ಪಿಗೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸಚಿವಾಲಯದ ಒಪ್ಪಿಗೆ ಬಾಕಿ ಇದ್ದು, ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Must Read

error: Content is protected !!