ಹೊಸದಿಗಂತ ವರದಿ ಹುಬ್ಬಳ್ಳಿ:
ಕೆಪಿಸಿಸಿ ರಾಜ್ಯಾಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧಾರವಾಡ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮೋಹನ ಲಿಂಬಿಕಾಯಿ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʻಡಿ.ಕೆ. ಶಿವಕುಮಾರ್ ಅವರ ಜೊತೆ ಸ್ಪರ್ಧೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಧಾರವಾಡ ಕ್ಷೇತ್ರದಲ್ಲಿ ನಿಮ್ಮಂಥ ಸಮರ್ಥ ಅಭ್ಯರ್ಥಿ ಮತ್ತೊಬ್ಬರಿಲ್ಲ, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.
‘ಕಾರವಾರ, ಹಾವೇರಿ, ಧಾರವಾಡ ಜಿಲ್ಲೆಯ ಜನರ ಜೊತೆ ಮೊದಲಿನಿಂದಲೂ ಸಂಪರ್ಕವಿದೆ. ಪದವೀಧರ ಪಶ್ಚಿಮ ಕ್ಷೇತ್ರದ ವಿಧಾನ ಪರಿಷತ್ ಸದಸ್ಯನಾಗಿಯೂ ಕಾರ್ಯನಿರ್ವಹಿಸಿದ್ದರಿಂದ ಸಾಕಷ್ಟು ಮಂದಿಯ ಪರಿಚಯವಿದೆ. ನಾಯಕರ ಸೂಚನೆ ಮತ್ತು ಭರವಸೆ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದೇನೆ. ಒಂದು ವೇಳೆ ಟಿಕೆಟ್ ಕೈತಪ್ಪಿದರೂ, ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳುವುದಿಲ್ಲʼ ಎಂದರು.