August 17, 2026
Monday, August 17, 2026
spot_img

ಬರ ಪರಿಸ್ಥಿತಿ ಎದುರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ: ಡಿಸಿಎಂ ಪರಮೇಶ್ವರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ.ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕುಡಿಯುವ ನೀರಿನ ಪೂರೈಕೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಈಗಾಗಲೇ ಪ್ರತಿ ಜಿಲ್ಲೆಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ಬರ ನಿರ್ವಹಣೆಗೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ವೈಯಕ್ತಿಕ ಠೇವಣಿ ಖಾತೆಗಳಲ್ಲಿ ರೂ.329 ಕೋಟಿ ಲಭ್ಯವಿದೆ ಎಂದು ಹೇಳಿದರು.

ಜುಲೈ 25ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ವಿಭಾಗದ ಬರ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಲಿದ್ದು, ನಂತರ ಮೈಸೂರು ವಿಭಾಗದಲ್ಲೂ ಇದೇ ರೀತಿಯ ಸಭೆ ನಡೆಯಲಿದೆ ಎಂದು ತಿಳಿಸಿದರು. ಈ ಸಭೆಗಳ ಬಳಿಕ ರಾಜ್ಯದ ಒಟ್ಟಾರೆ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ದೊರೆಯಲಿದೆ. ನಂತರ ರೈತರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ತಡೆಯಲು ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ ಗ್ರಾಮೀಣ ಯೋಜನೆಯಡಿ ತಕ್ಷಣ ಉದ್ಯೋಗ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !