Friday, July 1, 2022

Latest Posts

ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣ: ಮೂವರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದ ಡಾ.ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ , ಆಸ್ಪತ್ರೆ ವೈದ್ಯರು ನೀಡಿದ ಮಾಹಿತಿ ಪ್ರಕಾರ ಮೃತರೆಲ್ಲರೂ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ ಎಂದುಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ 24 ಗಂಟೆಯಲ್ಲಿ ಒಟ್ಟು 24 ರೋಗಿಗಳು ಸಾವನ್ನಪ್ಪಿದ್ದು, 23 ರೋಗಿಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 123 ಕೊರೋನಾ ಸೋಂಕಿತರು ದಾಖಲಾಗಿದ್ದು, ಅವರಲ್ಲಿ 14 ಜನರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ 14 ಸೋಂಕಿತರು ಸಾವನ್ನಪ್ಪಿದ್ದಾರೆ. ಇವರು ಕೋವಿಡ್ ಸಹಜಕಾಯಿಲೆ ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3 ಗಂಟೆ ಅವಧಿಯಲ್ಲಿ 3 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂವರು ಮಾತ್ರ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾಗಿ ತಿಳಿಸಿದರು.
ಹಾಗಾಗಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ 23 ರೋಗಿಗಳು ಆಕ್ಸಿಜನ್ ಕೊರತೆ ಮಾತ್ರದಿಂದಲೇ ಸಾವನ್ನಪ್ಪಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ. ಈ ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಬೇಕಿದೆ. ಸಿಎಂ ಯಡಿಯೂರಪ್ಪ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss