ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಗಳಿಗೆ ಕಡ್ಡಾಯ ರಜೆಯ ಮೇಲೆ ತೆರಳಲು ಆದೇಶಿಸಿದೆ.
ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ಐದು ಹುಲಿಗಳು ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಸತ್ತುಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿ ಗಮನಕ್ಕೆ ಬಾರದಿರುವುದು ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ.
ಈ ಕಾರಣದಿಂದ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ, ಶಾಖೆಯ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶಿಲಾಗಿದೆ ಎಂದು ತಿಳಿಸಿದೆ.