Wednesday, November 5, 2025

ವಿದ್ಯುತ್ ಸ್ಪರ್ಶದಿಂದ ಕಾಡಾನೆಗಳ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವಿಗೀಡಾಗಿದ್ದು, ಈ ಕುರಿತು ಸೂಕ್ತ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಜಮೀನು ಮಾಲೀಕನನ್ನು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ, ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ ಐದು ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸಚಿವ ಖಂಡ್ರೆ ಅವರು ಸೂಚಿಸಿದ್ದಾರೆ.

ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ, ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

ಘಟನೆ ಹಿನ್ನೆಲೆ
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ಭಾನುವಾರ ನಡೆದಿತ್ತು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!