ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಂತೂರು- ಮೂರ್ನಾಡು ನಿವಾಸಿಯಾದ ಪದ್ಮಾವತಿ ಎಂಬವರ ಮನೆಗೆ 2007ರಲ್ಲಿ ಅಕ್ರಮವಾಗಿ ಪ್ರವೇಶಿಸಿ ಮನೆಯ ಸಾಮಾಗ್ರಿಗಳನ್ನು ಒಡೆದು ಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿ ನಂಜರಾಯಪಟ್ಟಣ ಗ್ರಾಮ ನಿವಾಸಿ ಹೆಚ್.ಯು.ಚಂದ್ರಶೇಖರ್ (49) ಎಂಬಾತನನ್ನು ಬಂಧಿಸಿದ್ದಾರೆ.
ಮಣಿ ಎಂಬಾತ ತನ್ನ ಪತ್ನಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿರುವ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2002 ನೇ ಸಾಲಿನಲ್ಲಿಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ತಲೆಮರೆಸಿಕೊಂಡಿದ್ದ ಆರೋಪಿ ಆರ್ಜಿ ಗ್ರಾಮ ನಿವಾಸಿ ಮಣಿ (60) ಎಂಬವನನ್ನೂ ಬಂಧಿಸಲಾಗಿದೆ.
ಅದೇ ಸಾಲಿನಲ್ಲಿ ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿನ ಗುಹ್ಯ ಗ್ರಾಮದ ನಿವಾಸಿ ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಅತ್ಯಾಚಾರ ಮಾಡಿ ಕೊಲೆ ಬೆದರಿಕೆ ಹಾಕಿರುವ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ದೊಡ್ಡ ಪುಲಿಕೋಟು ಗ್ರಾಮದ ನಿವಾಸಿ ಪಣಿಎರವರ ಶಂಕರ (52) ಎಂಬಾತನನ್ನೂ ಬಂಧಿಸಲಾಗಿದೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ನಗರ ವೃತ್ತದ ಇನ್ಸ್ಪೆಕ್ಟರ್ ಪಿ.ಕೆ.ರಾಜು, ಗ್ರಾಮಾಂತರ ವೃತ್ತದ ಇನ್ಸ್ಪೆಕ್ಟರ್ ಯು.ಉಮೇಶ್, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡ ಈ ಮೂರು ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.