November 2, 2026
Monday, November 2, 2026
spot_img

ಕಬ್ಬು ಬೆಳೆಗಾರರ ಬೇಡಿಕೆ–ಕಾರ್ಖಾನೆಗಳ ಆರ್ಥಿಕ ಸ್ಥಿತಿ ಪರಿಗಣಿಸಿ ತೀರ್ಮಾನ: ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ರೈತರು ಒಪ್ಪಿಗೆ ಸೂಚಿಸಿದರೆ ಮಾತ್ರ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕಾರ್ಖಾನೆ ಮಾಲೀಕರು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿನ ದರ ನಿಗದಿ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು. ರೈತರ ಬೇಡಿಕೆ ಹಾಗೂ ಕಾರ್ಖಾನೆಗಳ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಬೇಕಿದೆ ಎಂದರು.

ಎಂಎಸ್ಪಿ ವಿಚಾರದಲ್ಲಿ ಕೇಂದ್ರದಿಂದ ರಾಜಕೀಯ:

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್ಪಿ) ನಿಗದಿಪಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಆದರೆ, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಎಂಎಸ್ಪಿ ಹೆಚ್ಚಳವಾದರೆ ಕಾರ್ಖಾನೆಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ ಎಂಬುದು ಮಾಲೀಕರ ಅಭಿಪ್ರಾಯ. ಹೀಗಾಗಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಬಳ್ಳಾರಿ ನಾಲಾ ವಿಸ್ತರಣೆಯೇ ಪರಿಹಾರ:

ಬೆಳಗಾವಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ ಮತ್ತು ಜಲಾವೃತ ಸಮಸ್ಯೆಗೆ ಬಳ್ಳಾರಿ ನಾಲಾ ವಿಸ್ತರಣೆಯೊಂದೇ ಶಾಶ್ವತ ಪರಿಹಾರ. ತಾತ್ಕಾಲಿಕ ಕ್ರಮಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ನೀರು ಸರಾಗವಾಗಿ ಹರಿಯಲು ನಾಲಾವನ್ನು ಅಗಲೀಕರಣ ಮಾಡುವುದು ಅನಿವಾರ್ಯ ಎಂದರು.

ಇದನ್ನೂ ಓದಿ:

ಜೈಲು ಚಳವಳಿ ಬಗ್ಗೆ ಮಾಹಿತಿ ಇಲ್ಲ:

ಗುರ್ಲಾಪುರದಲ್ಲಿ ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರೈತರು ಹಿಂಡಲಗಾ ಜೈಲು ಚಳವಳಿ ಹಮ್ಮಿಕೊಂಡಿರುವ ಬಗ್ಗೆ ಮಾಹಿತಿ ಇಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದಾಗಿ ತಿಳಿಸಿದರು.

ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ:

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಸಮರ್ಥ ಅಭ್ಯರ್ಥಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಡಿಸೆಂಬರ್ 15ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳಗಾವಿಯ ಚಳಿಗಾಲದ ಅಧಿವೇಶನವನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.

Must Read