ರಾಜ್ಯದಲ್ಲಿ 9 ಸಾವಿರ ಹೆಚ್ಚುವರಿ ಕೊಳವೆಬಾವಿ ಕೊರೆಸಲು ನಿರ್ಧಾರ: ಕೋಟ ಶ್ರೀನಿವಾಸ ಪೂಜಾರಿ

ಹೊಸದಿಗಂತ ವರದಿ, ಮಡಿಕೇರಿ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಡ ಕುಟುಂಬದವರಿಗೆ ಹೆಚ್ಚುವರಿಯಾಗಿ 9 ಸಾವಿರ ಕೊಳವೆ ಬಾವಿ ಕೊರೆಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ, ಪಟ್ಟಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ‘ಅಂತ್ಯೋದಯ’ ಕುರಿತ ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆಚ್ಚುವರಿಯಾಗಿ 9 ಸಾವಿರ ಕೊಳವೆ ಬಾವಿ ಕೊರೆಸುವಲ್ಲಿ ಒಂದು ತಿಂಗಳಲ್ಲಿ ಅನುಮತಿ ನೀಡಲಾಗುವುದು. ಜೊತೆಗೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಕಲ್ಯಾಣ ಇಲಾಖೆಯ ಸರ್ಕಾರದ ಯೋಜನೆಗಳನ್ನು ತಳ ಮಟ್ಟದ ಸಮಾಜಗಳಿಗೆ ತಲುಪಿಸುವ ನಿಟ್ಟಿನಲ್ಲಿ ‘ಅಂತ್ಯೋದಯ’ ಮೂಲಕ ಮಾಹಿತಿ ನೀಡುವ ಕಾರ್ಯಾಗಾರ ಏರ್ಪಡಿಸಿ, ಸ್ಥಳೀಯ ಜನ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.
ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗದ ಜನರಿಗೆ ಇರುವ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ತಳಮಟ್ಟದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಲು ಪ್ರಯತ್ನಿಸಲಾಗಿದೆ ಎಂದು ಸಚಿವರು ನುಡಿದರು.
ಜಿಲ್ಲೆಯಲ್ಲಿ 1,300 ಕ್ಕೂ ಹೆಚ್ಚು ಸ್ಥಳೀಯ ಪ್ರತಿನಿಧಿಗಳಿಗೆ ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಹಾಗೂ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಮುಂದಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಪಾರದರ್ಶಕವಾಗಿ ಜನ ಕಲ್ಯಾಣ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಂತಾಗಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಉದ್ದೇಶಿಸಲಾಗಿದೆ ಎಂದರು.
ವಸತಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಭಾರತೀಯ ತಾಂತ್ರಿಕ ಸಂಸ್ಥೆ(ಐಐಟಿ), ವೈದ್ಯಕೀಯ ಪ್ರವೇಶ ಪಡೆದಿರುವುದು ವಿಶೇಷವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸು ಮಾಡುವಲ್ಲಿ, ಸಂವಿಧಾನದ ಆಶಯದಂತೆ ಸರ್ಕಾರ ಕಡು ಬಡವರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿದೆ ಎಂದು ಸಚಿವರು ನುಡಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಗಿರಿಜನ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವೈದ್ಯರು, ಎಂಜಿನಿಯರ್‌ಗಳು ಆಗಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಲ್ಯಾಣ ಇಲಾಖೆಯಲ್ಲಿನ ಕಾರ್ಯಕ್ರಮಗಳನ್ನು ಹೇಗೆ ಪಡೆಯಬೇಕು ಎಂಬುದೇ ತಿಳಿದಿರುವುದಿಲ್ಲ. ಆ ನಿಟ್ಟಿನಲ್ಲಿ ಸ್ಥಳೀಯ ಗ್ರಾ.ಪಂ.ಪ್ರತಿನಿಧಿಗಳಿಗೆ ಮಾಹಿತಿ ಅತೀ ಮುಖ್ಯ ಎಂದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುಜಾಕುಶಾಲಪ್ಪ, ವೀಣಾ ಅಚ್ಚಯ್ಯ,ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಕರ್ನಾಟಕ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಎಸ್.ರವಿ ಕುಶಾಲಪ್ಪ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತ ಕೆ.ಎ.ದಯಾನಂದ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸಾಧಕರಿಗೆ ಅಭಿನಂದನೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಹಾಗೆಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಅಭಿನಂದಿಸಿದರು.
ಕಾನೂನು, ವೈದ್ಯಕೀಯ, ಎಂಜಿನಿಯರ್, ಸಂಶೋಧನಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹ ಧನ ನೀಡಲಾಯಿತು.
ಸವಲತ್ತು ವಿತರಣೆ: ಹಾಗೆಯೇ ಅಂಬೇಡ್ಕರ್ ಅಭಿವೃದ್ಧಿ, ವಾಲ್ಮೀಕಿ ಅಭಿವೃದ್ಧಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಅರ್ಹರಿಗೆ ಆಟೋ, ಟ್ಯಾಕ್ಸಿ ಹಾಗೂ ಪಂಪ್‍ಸೆಟ್ ಉಪಕರಣಗಳನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಕುಮಾರ್, ತಾಂಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರನಾಯಕ್, ಡಿ.ದೇವರಾಜ ಅರಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ರವಿ, ಪರಿಶಿಷ್ಟ ಪಂಗಡದ ಉಪ ನಿರ್ದೇಶಕ ರಾಜ್ ಕುಮಾರ್, ಆದಿಜಾಂಬವ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಶಂಭುಲಿಂಗಯ್ಯ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ದೇಸಾಯಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜು, ಗಿರಿಜನ ಸಂಶೋಧನಾ ಸಂಸ್ಥೆಯ ಜಂಟಿ ನಿರ್ದೇಶಕರಾದ ರಾಜೇಶ್ ಜಿ.ಗೌಡ, ಭಾರತಿ ಇತರರು ಇದ್ದರು.
ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಬಾಲಕೃಷ್ಣ ರೈ, ಎಸ್‍ಸಿಪಿ/ ಟಿಎಸ್‍ಪಿ ಹಾಗೂ ವಿವಿಧ ನಿಗಮಗಳ ಕಾರ್ಯಕ್ರಮಗಳ ಬಗ್ಗೆ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲೆ ನೀತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಕವಿತಾ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮಹಯದೇವಿ ಅವರು ಮಾಹಿತಿ ನೀಡಿದರು.
ಅಂಬೇಡ್ಕರ್, ವಾಲ್ಮೀಕಿ ಮತ್ತು ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಸ್ವಾಗತಿಸಿದರೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮೈಸೂರಿನ ರಾಮಚಂದ್ರ ಹಡಪದ ಮತ್ತು ತಂಡದವರು ನಾಡಗೀತೆ ಹಾಡಿದರು. ಮಾದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಲೋಕೇಶ್ ವಂದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!