ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಜಿಂಕೆ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಕೇರಳ ರಾಷ್ಟ್ರೀಯ ಹೆದ್ದಾರಿ-766ರ ಬಂಡೀಪುರ ಅಭಯಾರಣ್ಯದ ಮದ್ದೂರು ವಲಯದ ಕಗ್ಗಳದಹುಂಡಿ ಸಮೀಪದಲ್ಲಿ ಗುರುವಾರ ನಡೆಯಿತು. ಕಾರು ಚಾಲಕನನ್ನು ಬಂಧಿಸಲಾಗಿದೆ.
ಕೇರಳದ ವಯನಾಡ್‌ನ ಝಾಕೀರ್ ಬಂಧಿತ ಆರೋಪಿ. ಈತ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಸ್ವಿಫ್ಟ್ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದ. ಈ ವೇಳೆ ಕಗ್ಗಳದಹುಂಡಿ ಸಮೀಪ ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಜಿಂಕೆ ರಸ್ತೆಯಲ್ಲೇ ಪ್ರಾಣ ಕಳೆದುಕೊಂಡಿದೆ.
ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಚಾಲಕನ್ನು ಬಂಧಿಸಿ, ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಆರ್ಎಫ್ಒ ಕೆ.ಪಿ.ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.