November 4, 2026
Wednesday, November 4, 2026
spot_img

ಕಬ್ಬು ಬೆಲೆ ನಿಗದಿ ವಿಳಂಬ: ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ

ಹೊಸದಿಗಂತ ವರದಿ ಬೆಳಗಾವಿ:

ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡ ಗಣೇಶ ಇಳಗೇರಿ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ನಡೆದ ಮತ್ತೊಂದು ಸುತ್ತಿನ ಸಭೆಯೂ ವಿಫಲವಾಗಿದ್ದು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ ಅಧಿಕಾರಿಗಳು, ಕಬ್ಬಿನ ಬೆಂಬಲ ಬೆಲೆ ನಿರ್ಧಾರಕ್ಕೆ ಮತ್ತಷ್ಟು ಕಾಲಾವಕಾಶ ಕೋರಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕೇವಲ 3,500 ರೂ. ನೀಡುವುದಾಗಿ ಹೇಳುತ್ತಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಭರವಸೆ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಪಿಸಿದರು.

ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದರೂ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಬೆಳೆಗಳೂ ಶೇ.40ರಷ್ಟು ಹಾನಿಗೀಡಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:

ರೈತರ ಬೇಡಿಕೆ ಈಡೇರುವವರೆಗೂ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕದಲುವುದಿಲ್ಲ. ಎಷ್ಟು ಹೊತ್ತಾದರೂ ಇಲ್ಲಿಯೇ ವಾಸ್ತವ್ಯ ಹೂಡಿ ಧರಣಿ ಮುಂದುವರಿಸುತ್ತೇವೆ, ಸರ್ಕಾರ ಕೂಡಲೇ ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ. ಈಗಾಗಲೇ ಜೈಲು ಭರೋ ಯಾತ್ರೆ ಹುಕ್ಕೇರಿ ಟೋಲ್ ಪ್ಲಾಜಾ ತಲುಪಿದ್ದು, ಗುರುವಾರ ಬೆಳಿಗ್ಗೆ ಬೆಳಗಾವಿಗೆ ಆಗಮಿಸಲಿದೆ. ಸಾವಿರಾರು ರೈತರು ದನಕರುಗಳು, ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಗಣೇಶ ಇಳಗೇರಿ ಎಚ್ಚರಿಕೆ ನೀಡಿದರು.

Must Read

Skip to toolbar