ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಯೋಜನೆಗಳ ಸ್ಥಾಪನೆಗೆ ಭೂಮಿ ಮಂಜೂರು ಮಾಡಲು ವಿಳಂಬ ಮಾಡುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಈ ರೀತಿಯ ವಿಳಂಬ ನೀತಿ ಒಳ್ಳೆಯ ಸಂದೇಶವಲ್ಲ ಎಂದು ಅವರು ಪತ್ರದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
10 ತಿಂಗಳಿನಿಂದ ನನೆಗುದಿಗೆ ಬಿದ್ದ ಯೋಜನೆಗಳು
ಮಂಡ್ಯ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸುಸಜ್ಜಿತ ತಾಂತ್ರಿಕ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಕಳೆದ 10 ತಿಂಗಳಿನಿಂದ ರಾಜ್ಯ ಸರ್ಕಾರ ಹಾಗೂ ಮಂಡ್ಯ ಜಿಲ್ಲಾಡಳಿತವು ಭೂಮಿ ಮಂಜೂರಾತಿ ಪ್ರಕ್ರಿಯೆಯಲ್ಲಿ ಮೀನಮೇಷ ಎಣಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಸಹ ಅವರು ಪತ್ರದೊಂದಿಗೆ ಲಗತ್ತಿಸಿದ್ದಾರೆ.
ಕೇಂದ್ರ ಸಚಿವರು ಕೋರಿರುವ ಜಾಗದ ವಿವರ
ಮಂಡ್ಯ ಜಿಲ್ಲೆಯ ಬಸರಾಳುವಿನಲ್ಲಿ ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ ನಿರ್ಮಾಣಕ್ಕಾಗಿ ಸುಮಾರು 100 ಎಕರೆ ಭೂಮಿ ಹಾಗೂ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರಕ್ಕಾಗಿ ಹೆಚ್ಚುವರಿಯಾಗಿ 60 ಎಕರೆ ಭೂಮಿಯನ್ನು ಒದಗಿಸುವಂತೆ ಕೋರಿದ್ದರು.
ARAI (ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ) ಪರೀಕ್ಷಾ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಈ ಜಾಗವನ್ನು ಮೊದಲ ಹಂತದ ಭೂಮಿಗೆ ಹೊಂದಿಕೊಂಡಿರುವಂತೆ ಆದ್ಯತೆಯ ಮೇರೆಗೆ ಗುರುತಿಸಿಕೊಟ್ಟರೆ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬಹುದು ಎಂದು ಹೆಚ್‌ಡಿಕೆ ವಿವರಿಸಿದ್ದಾರೆ.
ಇದನ್ನೂ ಓದಿ:
ಜೆಡಿಎಸ್ ಹೋರಾಟಕ್ಕೆ ತಾತ್ಕಾಲಿಕ ವಿರಾಮ
ಇದೇ ವೇಳೆ, ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಮ್ಮಿಕೊಂಡಿದ್ದ ಸರಣಿ ಪ್ರತಿಭಟನೆಗಳಿಗೆ ದಸರಾ ಹಬ್ಬದ ಹಿನ್ನೆಲೆಯಲ್ಲಿ ತಾತ್ಕಾಲಿಕ ಬ್ರೇಕ್ ಹಾಕಲಾಗಿತ್ತು. ಆದರೆ ಹಬ್ಬ ಮುಗಿದಿರುವುದರಿಂದ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ಸ್ವರೂಪ ಹೇಗಿರಲಿದೆ ಎಂಬುದನ್ನು ಕುಮಾರಸ್ವಾಮಿ ಅವರು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.



