ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದಿಲ್ಲಿಯಿಂದ ಎಂಡಿಎಂಎ ಮಾದಕವಸ್ತು ಖರೀದಿಸಿ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿದ್ದ ಬರೋಬ್ಬರಿ 5.20 ಕೋಟಿ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ಇದರೊಂದಿಗೆ ದಿಲ್ಲಿ- ಬೆಂಗಳೂರು ಮಾರ್ಗವಾಗಿ ಕರಾವಳಿ ಕರ್ನಾಟಕ ಹಾಗೂ ಕೇರಳಕ್ಕೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಜಾಲವನ್ನು ಬಯಲಿಗೆಳೆದಂತಾಗಿದೆ.
ಬೆಳ್ತಂಗಡಿ ತಾಲ್ಲೂಕಿನ ಇಂಡಬೆಟ್ಟು ಗ್ರಾಮದ ಮೊಹಮ್ಮದ್ ಅಲ್ಫಾಜ್ ( 28), ಉಜಿರೆ ಲಾಯಿಲಾ ಗ್ರಾಮದ ಮೊಹಮ್ಮದ್ ಮುಸ್ತಾಫಾ (28) ಬಂಧಿತ ಆರೋಪಿಗಳಾಗಿದ್ದಾರೆ. ಸಿಸಿಬಿ ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಕಾರ್ಯಾಚರಣೆ ಕಳೆದ ಜೂನ್‌ನಲ್ಲಿ ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಾದಕ ವಸ್ತು ವಶ ಪ್ರಕರಣದ ಮುಂದುವರಿದ ತನಿಖೆಯ ಭಾಗವಾಗಿದೆ.
ಸುರತ್ಕಲ್ ಪ್ರಕರಣವೇ ದೊಡ್ಡ ಜಾಲಕ್ಕೆ ಸುಳಿವು
2026ರ ಜೂ.25ರಂದು, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ಎಂಡಿಎಂಎ ಸಂಗ್ರಹಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಣ್ಣಪ್ಪ ಸ್ವಾಮಿ ಯಾನೆ ಮನು ಎಂಬಾತನನ್ನು ಬಂಧಿಸಿ, ಆತನಿಂದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಇದರ ಅಂದಾಜು ಮೌಲ್ಯ 1.50 ಲಕ್ಷ ರೂ. ಆಗಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್‌ಗಳ ಬಗ್ಗೆ ಮಹತ್ವದ ಮಾಹಿತಿ ಪೊಲೀಸರಿಗೆ ಲಭ್ಯವಾಯಿತು.
ದೆಹಲಿ-ಬೆಂಗಳೂರು ಮಾರ್ಗದಲ್ಲಿ ಸಿಸಿಬಿ ಬಲೆ
ತನಿಖೆಯ ವೇಳೆ, ಆರೋಪಿಗಳು ರಾಜಧಾನಿ ದಿಲ್ಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಸಿಕ್ಕಿತು. ಈ ಮಾಹಿತಿಯ ಆಧಾರದಲ್ಲಿ ಮಂಗಳೂರು ಸಿಸಿಬಿ ತಂಡ ಜು.15, 2026ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ರಾಯಲ್ ಇನ್ ಲಾಡ್ಜ್’ ಮೇಲೆ ದಾಳಿ ನಡೆಸಿತು. ಅಲ್ಲಿ ತಂಗಿದ್ದ ಈ ಆರೋಪಿಗಳನ್ನು ತ್ತೆ ಹಚ್ಚಿ, ಅವರುಗಳ ವಶದಿಂದ ಒಟ್ಟು 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ, ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮೊಹಮ್ಮದ್ ಅಲ್ಫಾಜ್ ಎಂಬಾತನ ವಿರುದ್ದ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತವೆ.
ಇದನ್ನೂ ಓದಿ:
ಆರೋಪಿತರು ಕಾರಿನ ಮೂಲಕ ದೆಹಲಿಯಿಂದ ಮಾದಕವಸ್ತುವನ್ನು ಖರೀದಿಸಿಕೊಂಡು, ಬೆಂಗಳೂರು ನಗರವನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳ ರಾಜ್ಯದ ಇತರೆ ಕಡೆಗಳಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿರುವುದು ತನಿಖೆಯಿಂದ ತಿಳಿದುಬಂದಿದ್ದು, ಈ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿದಿದೆ. ಈ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದಾರೆ.



