ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ ಹರಿಯಾಣ ಮತ್ತು ಗುಜರಾತ್‌ನ ನಕಲಿ ಮತದಾರರನ್ನು ಸೇರಿಸಿಕೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಭೆಯಲ್ಲಿ ಮಾತನಾಡಿದ ಬ್ಯಾನರ್ಜಿ, ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಉಳಿಯದ ಹೊರತು ನ್ಯಾಯಯುತ ಚುನಾವಣೆ ಅಸಾಧ್ಯ ಎಂದರು.
ಮುಖ್ಯ ಚುನಾವಣಾ ಆಯುಕ್ತರನ್ನಾಗಿ(ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಆತುರದಿಂದ ನೇಮಕ ಮಾಡುವ ಮೂಲಕ ಮತ್ತ್ತೆ ಬಿಜೆಪಿ ಮತದಾನದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಈ ರೀತಿ ಹದೆಗೆಟ್ಟಿರುವ ಚುನಾವಣಾ ವ್ಯವಸ್ಥೆಯನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಕೇಂದ್ರ ಚುನಾವಣಾ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಬ್ಯಾನರ್ಜಿ ಎಚ್ಚರಿಸಿದ್ದಾರೆ.
ಬಿಜೆಪಿ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಆಶೀರ್ವಾದದೊಂದಿಗೆ ಕುಶಲತೆಯಿಂದ ನಿರ್ವಹಿಸುತ್ತಿದೆ ಎಂಬುದು ತುಂಬಾ ಸ್ಪಷ್ಟವಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.
ಇದೇ ವೇಳೆ 2026 ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಸಿಎಂ 215 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮತ್ತೆ ಅಧಿಕಾರಕ್ಕೆ ಬರಲಿದೆ ಮತ್ತು ಬಿಜೆಪಿಯ ಸಂಖ್ಯೆಯನ್ನು ಗಮನಾರ್ಹವಾಗಿ ಇಳಿಸಿಲಾಗುವುದು ಎಂದು ಪ್ರತಿಪಾದಿಸಿದರು.