November 12, 2026
Thursday, November 12, 2026
spot_img

ಅಪ್ರಾಪ್ತ ವಯಸ್ಕ ಬಾಲಕಿಗೆ ನ್ಯಾಯಕ್ಕೆ ಆಗ್ರಹ: ಮುಂಡಗೋಡ ಸಂಪೂರ್ಣ ಬಂದ್

ಹೊಸದಿಗಂತ ವರದಿ ಮುಂಡಗೋಡ:

ತಾಲೂಕಿನ ಹನ್ನೆರಡು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅಮಾನವೀಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಹಾಗೂ ಆರೋಪಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳು ಗುರುವಾರ ಕರೆ ನೀಡಿದ್ದ ‘ಮುಂಡಗೋಡ ಬಂದ್’ಗೆ ಪಟ್ಟಣದಲ್ಲಿ ಸಂಪೂರ್ಣ ಹಾಗೂ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ಪಕ್ಷಭೇದ ಹಾಗೂ ಜಾತ್ಯತೀತವಾಗಿ ವಿವಿಧ ಸಂಘಟನೆಗಳು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಮುಚ್ಚಿ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿದರು. ಸಾಮಾನ್ಯ ದಿನಗಳಲ್ಲಿ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವಾಣಿಜ್ಯ ಪ್ರದೇಶಗಳು ದಿನವಿಡೀ ವ್ಯಾಪಾರ ಚಟುವಟಿಕೆಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪರಿಣಾಮವಾಗಿ ಇಡೀ ಮುಂಡಗೋಡ ಪಟ್ಟಣ ಬಹುತೇಕ ಸ್ತಬ್ಧವಾಗಿತ್ತು.

ಗುರುವಾರ ಬೆಳಿಗ್ಗೆ ಹತ್ತು ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಅಲ್ಲಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಹಿಳೆಯರು, ವಿದ್ಯಾರ್ಥಿನಿಯರು, ನ್ಯಾಯವಾದಿಗಳು, ನಿವೃತ್ತ ಸೈನಿಕರು ಸೇರಿದಂತೆ ವಿವಿಧ ವರ್ಗದ ಜನರು ಪಾಲ್ಗೊಂಡಿದ್ದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನಾಕಾರರು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಆಕ್ರೋಶಭರಿತ ಘೋಷಣೆಗಳನ್ನು ಕೂಗಿದರು. ಹಿಂದೂಪರ ಸಂಘಟನೆಗಳ ಮುಖಂಡ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಂತ್ರಸ್ತ ಬಾಲಕಿಗೆ ಶೀಘ್ರ ನ್ಯಾಯ ದೊರಕಿಸಿಕೊಡಬೇಕು ಮತ್ತು ಇಂತಹ ಹೇಯ ಕೃತ್ಯ ಎಸಗುವವರಿಗೆ ಸಮಾಜಕ್ಕೆ ಪಾಠವಾಗುವಂತಹ ಕಠಿಣ ಶಿಕ್ಷೆಯಾಗಬೇಕು,ಎಂದು ಒತ್ತಾಯಿಸಿದರು. ಬಾಲಕಿಗೆ ನ್ಯಾಯ ಸಿಗುವವರೆಗೂ ಹೋರಾಟದ ಧ್ವನಿ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಎಸ್‌ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್:

ಪ್ರತಿಭಟನೆ ಹಾಗೂ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದೀಪನ್ ಎಂ.ಎನ್. ಅವರು ಖುದ್ದಾಗಿ ಸ್ಥಳದಲ್ಲಿದ್ದು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಒಟ್ಟಾರೆ ಸಂತ್ರಸ್ತ ಬಾಲಕಿಗೆ ನ್ಯಾಯ ದೊರೆಯಬೇಕೆಂಬ ಒಕ್ಕೊರಲಿನ ಕೂಗಿನೊಂದಿಗೆ ನಡೆದ ಮುಂಡಗೋಡ ಬಂದ್ ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು.

Must Read