ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದ ಕುರಂಗ್ ಕುಮೇ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಸುಮಾರು 20 ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಗುರುವಾರ ಮುಂಜಾನೆ ಪಾರ್ಸಿ ಪಾರ್ಲೊ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಸುತ್ತಮುತ್ತಲಿನ ಮನೆಗಳಿಗೆ ವ್ಯಾಪಿಸಿದೆ. ಘಟನೆಯಿಂದ ಹಲವು ಕುಟುಂಬಗಳು ಮನೆಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿವೆ.
ಕೊಲೊರಿಯಾಂಗ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪಾನಿ ತಾರಾಮ್ ಅವರು ಈ ದುರಂತವನ್ನು ಖಚಿತಪಡಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಮತ್ತಷ್ಟು ಹಾನಿಯಾಗಿರುವ ಸಾಧ್ಯತೆಯಿದ್ದು, ಸಂಪೂರ್ಣ ವಿವರಗಳು ಲಭ್ಯವಾಗಬೇಕಿದೆ.
ಇದನ್ನೂ ಓದಿ:
ಈ ದುರಂತಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿರುವ ಅವರು, ಕಾಣೆಯಾದವರು ಸುರಕ್ಷಿತವಾಗಿ ಮರಳಲಿ ಎಂದು ಪ್ರಾರ್ಥಿಸಿದ್ದಾರೆ. ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತಕ್ಷಣ ಪರಿಹಾರ ಮತ್ತು ಅಗತ್ಯ ನೆರವು ಒದಗಿಸುವಂತೆ ಒತ್ತಾಯಿಸಿದ್ದಾರೆ.
ಅಲ್ಲದೆ, ಸ್ಥಳದಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿರುವ ಸ್ಥಳೀಯ ಆಡಳಿತ, ತುರ್ತು ಸೇವೆಗಳ ಸಿಬ್ಬಂದಿ, ಸ್ವಯಂಸೇವಕರು ಹಾಗೂ ಗ್ರಾಮಸ್ಥರ ಕಾರ್ಯವನ್ನು ಶ್ಲಾಘಿಸಿದ್ದಾರೆ.



