ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ.
ಮಾವಿನಕೆರೆಯಲ್ಲಿ ಹೆಚ್ಚು ಮಂದಿ ಆಗಮಿಸುವ ಸಾಧ್ಯತೆ ಇದ್ದು, ಈಗಾಗಲೇ ನಾಲ್ಕು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆದಿದ್ದು, ಮೈಸೂರಿನಿಂದ ಕುರ್ಚಿ ಹಾಗೂ ಶಾಮಿಯಾನಗಳನ್ನು ತರಿಸಲಾಗಿದೆ. ವಿದ್ಯುತ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಬೆಳಗ್ಗೆ 9:30ರವರೆಗೆ ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಅಂತಿಮ ಯಾತ್ರೆ ಮಾವಿನಕೆರೆಗೆ ಸಾಗಲಿದೆ. ಮಾರ್ಗಮಧ್ಯೆ ಸಾರ್ವಜನಿಕರ ದರುಶನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 12 ಗಂಟೆಗೆ ಪಾರ್ಥೀವ ಶರೀರ ಮಾವಿನಕೆರೆಗೆ ತಲುಪಲಿದೆ. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರಾಜಕೀಯ ಗಣ್ಯರು ಹಾಗೂ ಕುಟುಂಬದ ಅತ್ಯಾಪ್ತರು ಅಂತಿಮ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ 3 ಗಂಟೆಯ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಅಂತ್ಯಕ್ರಿಯೆಯಲ್ಲಿ ಬಿಜೆಪಿ ನಾಯಕರು, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ ಲಾಲ್ ಖಟ್ಟರ್, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ರಾಘವೇಂದ್ರ ಭಾಗಿಯಾಗಲಿದ್ದಾರೆ.



