ಶಾಂತಿ, ನೆಮ್ಮದಿ, ಸಾಮರಸ್ಯ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ: ಸಚಿವ ದಿನೇಶ್ ಗುಂಡೂರಾವ್

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌
 
ಸರಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಜನಪರ ಯೋಜನೆಗಳು ಜನತೆಯಿಂದ ಕೈತಪ್ಪದಂತೆ ಎಚ್ಚರವಹಿಸುವಂತೆ ಅಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಘೋಷಿಸಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ. ನಾವು ನುಡಿದಂತೆ ನಡೆಯುತ್ತೇವೆ. ಹಂತ ಹಂತವಾಗಿ ಎಲ್ಲಾ ಯೋಜನೆಗಳು ಜಾರಿಯಾಗಲಿವೆ ಎಂದರು.

ಶಾಂತಿ, ನೆಮ್ಮದಿ, ಸಾಮರಸ್ಯ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ವಿಶೇಷ ಒತ್ತು ನೀಡಲಾಗುವುದು. ಶಾಂತಿ ಕದಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಬೆಂಕಿ ಹಚ್ಚುವುದು ಸುಲಭ ಆದರೆ, ಶಾಂತಿ ಕಾಪಾಡುವುದು ಅಷ್ಟೇ ಕಷ್ಟಕರ. ಆದ್ದರಿಂದ ಜಿಲ್ಲೆಯ ಜನತೆ ಸಾಮರಸ್ಯಕ್ಕೆ ಆದ್ಯತೆ ನೀಡಬೇಕು. ದುಷ್ಟ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಪೊಲೀಸರು ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದರು.

ದ.ಕ.ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ಧಾರಿ ವಹಿಸಿದ್ದೇನೆ. ಜನತೆಯ ವಿಶ್ವಾಸ ಗಳಿಸುವುದರೊಂದಿಗೆ ಇಲ್ಲಿನ ಸಮಸ್ಯೆಗಳನ್ನು ಅರಿತುಕೊಂಡು ನಿಭಾಯಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ನನ್ನ ಕಚೇರಿ ಸದಾ ತೆರೆದಿರಲಿದ್ದು, ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಸದ್ಯ ಮಳೆಗಾಲ ಎದುರಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸ್ವಲ್ಪ ತಡೆಯಾಗಬಹುದು ಎಂದವರು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸರಕಾರಿ ಭೂಮಿ ಬೇರೆ ಉದ್ದೇಶಗಳಿಗೆ ಬಳಕೆಯಾಗದಂತೆ ಸರಕಾರ ಎಚ್ಚರವಹಿಸಲಿದೆ. ಸರಕಾರಿ ಭೂಮಿಯನ್ನು ಯಾವುದೇ ಸಂಘಟನೆ ವಶಕ್ಕೆ ಪಡೆದಿದ್ದರೂ ಕಂದಾಯ ಇಲಾಖೆ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!