ಹೊಸದಿಗಂತ ವರದಿ ಉಳ್ಳಾಲ:
ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ಉಳ್ಳಾಲ ತಾಲೂಕಿನಲ್ಲಿ ಮುಂದಿನ 30 ವರ್ಷಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ವಿದ್ಯುತ್, ರಸ್ತೆ, ಸೇತುವೆ, ಆಸ್ಪತ್ರೆ ಹಾಗೂ ಸಾರಿಗೆ ವ್ಯವಸ್ಥೆಗಳನ್ನು ಬಲಪಡಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.

ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ ಪ್ರಸ್ತಾವಿತ 110 ಕೆ.ವಿ. ವಿದ್ಯುತ್ ಉಪಕೇಂದ್ರದ ಕಾಮಗಾರಿ ಪರಿಶೀಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉಪಕೇಂದ್ರದ ಸಾಮರ್ಥ್ಯವನ್ನು 33 ಕೆ.ವಿ.ಯಿಂದ 110 ಕೆ.ವಿ.ಗೆ ಮೇಲ್ದರ್ಜೆಗೇರಿಸಲು ಸುಮಾರು 94 ಕೋಟಿ ರೂ. ವೆಚ್ಚದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಮುಂದಿನ ಮೂರು ದಶಕಗಳ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗಲಿದೆ. ಕೊಣಾಜೆಯಿಂದ ದೇರಳಕಟ್ಟೆಯವರೆಗೆ ಭೂಗತ ಕೇಬಲ್ ಮೂಲಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಜೆಪ್ಪು ಉಪಕೇಂದ್ರದಿಂದ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಭೂಗತ ಕೇಬಲ್ ಸಂಪರ್ಕ ಕಲ್ಪಿಸುವ ಕಾಮಗಾರಿಯೂ ನಡೆಯುತ್ತಿದೆ ಎಂದರು.
ಉಳ್ಳಾಲಕ್ಕೆ ಪ್ರಜಾಸೌಧ, ಮುಡಿಪಿನಲ್ಲಿ ಕೆಎಸ್ಆರ್ಟಿಸಿ ಡಿಪೋ
ಕೊಣಾಜೆಯ ವಿದ್ಯುತ್ ಉಪವಿಭಾಗ ವಿಸ್ತರಣೆಗೆ ಮಂಗಳೂರು ವಿಶ್ವವಿದ್ಯಾಲಯದ ಸಮೀಪ ಹೆಚ್ಚುವರಿ ಜಾಗ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಇದೇ ಪ್ರದೇಶದಲ್ಲಿ ಉಳ್ಳಾಲ ತಾಲೂಕು ಕಚೇರಿ ಹಾಗೂ ಪ್ರಜಾಸೌಧ ನಿರ್ಮಾಣಕ್ಕೂ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ. ಮುಡಿಪಿನಲ್ಲಿ ಕೆಎಸ್ಆರ್ಟಿಸಿ ಡಿಪೋ ಸ್ಥಾಪಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.
ಇದನ್ನೂ ಓದಿ:
ಆರೋಗ್ಯ ಕ್ಷೇತ್ರಕ್ಕೆ 46 ಕೋಟಿ ರೂ. ಯೋಜನೆ
ಮುಡಿಪಿನಲ್ಲಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ನಿರ್ಮಿಸಲು ಅನುದಾನ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಕೋಟೆಕಾರ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 6 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವುದರ ಜೊತೆಗೆ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗುವುದು. ಇದರಿಂದ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲು ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದ್ದರು. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಮುಖ್ಯ ಇಂಜಿನಿಯರ್ ರವಿಕಾಂತ್ ಆರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



