ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್‌ಗೆ ಡಿಸಿಎಂ ಹುದ್ದೆಯೇ ಗಟ್ಟಿಯಾಗಿದೆ. ಸರ್ಕಾರ ರಚನೆಯ ಮೈತ್ರಿ ಸೂತ್ರ ಇಂದು ರಿವೀಲ್ ಆಗಲಿದೆ.
ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಹೊರಬಿದ್ದು ಬರೋಬ್ಬರಿ 12 ದಿನಗಳು ಕಳೆದ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಬಿಜೆಪಿ, ಶಿವಸೇನೆ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಹಾವು ಏಣಿ ಆಟ ಅಂತ್ಯವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಇಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಇಂದು ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ತಯಾರಿ ನಡೆದಿದ್ದು, ಸಂಜೆ 5:30ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಬುಧವಾರ ರಾಜಭವನಕ್ಕೆ ಭೇಟಿ ನೀಡಿದ್ದ ಮಹಾಯುತಿ ಮೈತ್ರಿಕೂಟದ ನಾಯಕರು ಸರಕಾರ ರಚನೆಗೆ ಹಕ್ಕು ಮಂಡಿಸಿದ್ದರು. ರಾಜ್ಯಪಾಲರಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಂತರ, ಮಾತನಾಡಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮಹಾಯುತಿ ಸರ್ಕಾರ ರಚನೆಗೆ ಹಕ್ಕು ಸಾಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ಹೆಸರನ್ನು ಬೆಂಬಲಿಸಿದ್ದಕ್ಕಾಗಿ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೂಡ ನನ್ನ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ಹೇಳಿದ್ದರು.