Saturday, March 25, 2023

Latest Posts

ಮಕ್ಕಳ ಆರೋಗ್ಯ ಕಾಳಜಿ: ಮಾ.13 ರಂದು ಜಂತುಹುಳು ನಿವಾರಣಾ ಕಾರ್ಯಕ್ರಮ

ಹೊಸದಿಗಂತ ವರದಿ ಮಡಿಕೇರಿ:

ಮಕ್ಕಳ ಆರೋಗ್ಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಾರ್ಚ್‌ 13ರಂದು ರಾಷ್ಟ್ರೀಯ ಜಂತುಹುಳು ನಿಯಂತ್ರಣ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ ಆಲ್‍ಬೆಂಡ್‍ಜೋಲ್ ಮಾತ್ರೆ ವಿತರಿಸಬೇಕು. ಅರ್ಹ ಮಕ್ಕಳು ಇದರಿಂದ ಹೊರಗುಳಿಯಬಾರದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿವರಿಸಿದರು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಕೋರಿದರು.

ಎನ್‍ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಆಲ್‍ಬೆಂಡಜೋಲ್ 400 ಎಂ.ಜಿ ಮಾತ್ರೆಗಳನ್ನು ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!