ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಎರಡೂ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMOs) ನಡುವಿನ ‘ನೇರ ಮಾತುಕತೆ’ಯ ಕಾರಣ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸಂಸತ್ತಿಗೆ ತಿಳಿಸಿದೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ಅಮೆರಿಕದ ಹಸ್ತಕ್ಷೇಪ ಇರುವುದು ಸತ್ಯವೇ ಎಂದು ಕೇಳಿದ ಪ್ರಶ್ನೆಗೆ ವಿದೇಶಾಂಗ ಸಚಿವಾಲಯ(MEA) ಇಂದು ಲಿಖಿತ ಉತ್ತರ ನೀಡಿದೆ.
ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು, ಪಾಕಿಸ್ತಾನ ಮೊದಲು ಕದನ ವಿರಾಮದ ಬಗ್ಗೆ ಪ್ರಸ್ತಾಪ ಮಾಡಿತು ಎಂದು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ‘ಎರಡೂ ರಾಷ್ಟ್ರಗಳ DGMOs ನಡುವಿನ ನೇರ ಮಾತುಕತೆಯ ಪರಿಣಾಮವಾಗಿ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ ಎಂದು ಹೇಳಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಏಪ್ರಿಲ್ 22 ರಿಂದ ಮೇ 10 ರ ನಡುವೆ, ಅಮೆರಿಕ ಸೇರಿದಂತೆ ವಿವಿಧ ಹಂತಗಳಲ್ಲಿ ವಿವಿಧ ದೇಶಗಳೊಂದಿಗೆ ಹಲವಾರು ರಾಜತಾಂತ್ರಿಕ ಸಂಭಾಷಣೆಗಳು ನಡೆದಿವೆ ಎಂದು ಸಚಿವರು ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.