ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಡಿಜಿಪಿ ಆರ್. ರಾಮಚಂದ್ರ ರಾವ್ ವಿಡಿಯೋ ರಾಜ್ಯದ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡುಮಾಡಿದೆ.
ಸಮವಸ್ತ್ರದಲ್ಲೇ ಕಚೇರಿಯೊಳಗೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವಂತೆ ಕಾಣುವ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಮಚಂದ್ರ ರಾವ್ ಸ್ಪಷ್ಟನೆ ನೀಡಿದ್ದಾರೆ. ಇದು ಎಐ ತಂತ್ರಜ್ಞಾನ ಬಳಸಿ ತಯಾರಿಸಲಾದ ಕೃತಕ ವಿಡಿಯೋ ಎಂದು ಅವರು ಹೇಳಿದ್ದಾರೆ. ತಮ್ಮ ಪ್ರತಿಷ್ಠೆಗೆ ಧಕ್ಕೆ ತಂದಿರುವ ಸುಳ್ಳು ವಿಷಯಗಳನ್ನು ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಸಂಪೂರ್ಣ ತನಿಖೆಗೆ ಒತ್ತಾಯಿಸಿದ್ದಾರೆ.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ನಲಾದ ಒಂದು ಆಡಿಯೋ ಕ್ಲಿಪ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಷಯ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ವಿಡಿಯೋ ಮತ್ತು ಆಡಿಯೋ ಎರಡೂ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದ್ದು, ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದಾರೆ.


