ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿದ್ದೇನೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿ ಬಳಿಕ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಶವ ಹೂತು ಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು, ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಜಾಮೀನು ಪಡೆಯಲು 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು.
ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.

