ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆಸಿದ್ದು, ಸಭೆಯಲ್ಲಿ ಹೈಕಮಾಂಡ್ ಭೇಟಿಗೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಎಸ್‌ಸಿ ವರ್ಗದ ಎಲ್ಲಾ ಸಮುದಾಯಗಳ ಹಿತಾಸಕ್ತಿಗಳನ್ನು ಪರಿಗಣಿಸಬೇಕಾಗಿರುವುದರಿಂದ ವಿಷಯ ಸೂಕ್ಷ್ಮವಾಗಿದೆ. ಈ ಮೀಸಲಾತಿಯು ಸಮುದಾಯಕ್ಕೆ ಸಹಾಯ ಮಾಡುತ್ತದೆ ಎಂದು ಮನವರಿಕೆ ಮಾಡುವುದು ಅಗತ್ಯವಿದೆ ಎಂದು ತಿಳಿಸಿದರು ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 21 ರಂದು ಎಸ್‌ಸಿ ವರ್ಗದ ವಿವಿಧ ಸಮುದಾಯಗಳಿಗೆ ಸೇರಿದ ಕಾಂಗ್ರೆಸ್ ಶಾಸಕರು ಸಭೆ ನಡೆಸಿ, ಒಳಮೀಸಲಾತಿ ಕುರಿತು ಅಂತಿಮ ನಿರ್ಧಾರಕ್ಕೆ ಬರಲಿದ್ದು, ಬಳಿಕ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.