ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಾತಿ ಗಣತಿ ಜಾರಿಗೊಳಿಸುವ ಬಗ್ಗೆ ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ ಎಂದರು.
ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಇದು ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಮಾತ್ರ ಅಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಇದು 7 ಕೋಟಿ ಕನ್ನಡಿಗರ ಸಮೀಕ್ಷೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.