ಅಶ್ವಿನಿ ಪುನೀತ್ ರಾಜ್‌ಕುಮಾರ್ ಕುರಿತು ಅವಹೇಳನ ಪೋಸ್ಟ್: ಮನುವಾದಕ್ಕೆ ಹೋಲಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದಿ. ಪುನೀತ್ ರಾಜ್ ಕುಮಾರ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ ಕುಮಾರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಯೊಬ್ಬ ಅವಹೇಳನ ಮಾಡಿ ಪೋಸ್ಟ್‌ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ’ ಎಂದು ಹೇಳಿಕೆ ನೀಡಿದ್ದಾರೆ.

ರಾಯಲ್ ಚಾಲೆಂಜರ್ಸ್‌ ತಂಡದ ರಾಯಭಾರಿ ಆಗಿದ್ದ ಪುನೀತ್ ರಾಜ್‌ಕುಮಾರ್ ಅವರ ಸಾವಿನ ನಂತರ 2024ರಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್‌ ಈವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಗೌರವಿಸಿ ಅವರಿಂದಲೇ ಹೊಸ ಟೀಶರ್ಟ್ ಬಿಡುಗಡೆ ಮಾಡಿಸಲಾಯಿತು. ಆದರೆ, ಈ ಬಗ್ಗೆ ಗಜಪಡೆ ಎಂಬ ಟ್ವಿಟರ್ ಖಾತೆಯನ್ನು ಹೊಂದಿದ ವ್ಯಕ್ತಿ ಗಂಡನಿಲ್ಲದ ಮಹಿಳೆಯಿಂದ ಅನ್‌ಬಾಕ್ಸಿಂಗ್ ಮಾಡಿಸಿದ್ದಕ್ಕೆ ಆರ್‌ಸಿಬಿ ಸೋಲುತ್ತಿದೆ ಎಂದು ಹೇಳಿ ಟ್ವೀಟ್‌ ಮಾಡಿದ್ದನು. ಈಗ ಈ ವಿಚಾರ ರಾಜ್ಯಾದ್ಯಂತ ಕ್ರೀಡೆ, ಸಿನಿಮಾ ಕ್ಷೇತ್ರ, ಸಾಮಾಜಿಕ ಜಾಲತಾಣ ಹಾಗೂ ಮಹಿಳಾಪರ ಹೋರಾಟಗಾರರಲ್ಲಿ ಭಾರಿ ಕಿಚ್ಚು ಹೊತ್ತಿಸಿದೆ.ಆದರೆ, ಈ ಕುರಿತು ಎಲ್ಲವನ್ನೂ ಕೂಲಂಕುಷವಾಗಿ ತಿಳಿದುಕೊಂಡು ತಡವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ರಾಜಕೀಯ ಬಣ್ಣವನ್ನು ಬಳಿದಿದ್ದಾರೆ.

‘ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ.

ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ. ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ.

ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!