September 24, 2026
Thursday, September 24, 2026
spot_img

SIR ವಿರುದ್ಧ ಅಸಮಾಧಾನ: ಮತ್ತೆ ಹೊಸ ಪರಿಷ್ಕರಣೆಗೆ ಡಿಕೆಶಿ ಆಗ್ರಹ, ಸಿಇಸಿ ರಾಜೀನಾಮೆಗೆ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳ ವರದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಹೊಸದಾಗಿ SIR ನಡೆಸುವಂತೆ ಆಗ್ರಹಿಸಿದ್ದಾರೆ. ಜತೆಗೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಮತದಾರರ ಪಟ್ಟಿ ನಿರ್ವಹಣೆ ಹಾಗೂ SIRಗೆ ಸಂಬಂಧಿಸಿದ ಕೆಲವು ನಿರ್ಧಾರಗಳ ಕುರಿತು ಕನಿಷ್ಠ 14 ಬಾರಿ ಆಕ್ಷೇಪ ದಾಖಲಿಸಿದ್ದಾರೆ ಎಂಬ ವರದಿ ಇತ್ತೀಚೆಗೆ ಪ್ರಕಟವಾಗಿತ್ತು. ಈ ಬೆಳವಣಿಗೆಯನ್ನು ಉಲ್ಲೇಖಿಸಿದ ಡಿಕೆಶಿ, ಚುನಾವಣಾ ಪ್ರಕ್ರಿಯೆ ಮತ್ತು ಮತದಾನದ ಹಕ್ಕಿನ ಕುರಿತು ಪ್ರಶ್ನೆಗಳು ಉದ್ಭವಿಸಿವೆ ಎಂದು ಹೇಳಿದರು.

ಒಂದು ಕೋಟಿಗೂ ಹೆಚ್ಚು ಹೆಸರು ಔಟ್

ಕರ್ನಾಟಕದ ಮತದಾರರ ಪಟ್ಟಿಯಿಂದ ವಿವಿಧ ಕಾರಣಗಳಿಗಾಗಿ ಒಂದು ಕೋಟಿಗೂ ಹೆಚ್ಚು ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಡಿಕೆಶಿ ಆರೋಪಿಸಿದರು. ರಾಜ್ಯದ ಮತದಾರರ ಪಟ್ಟಿಯನ್ನು ಮೊದಲು ಸಂಪೂರ್ಣವಾಗಿ ಅಂತಿಮಗೊಳಿಸಬೇಕು. ಬಳಿಕ ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಬಹುದು ಎಂದು ಅವರು ಹೇಳಿದರು. SIR ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಿ, ಎಲ್ಲ ಅರ್ಹ ನಾಗರಿಕರ ಮತದಾನದ ಹಕ್ಕು ಸುರಕ್ಷಿತವಾಗಿರುವಂತೆ ನೋಡಿಕೊಳ್ಳಬೇಕು ಎಂಬುದು ತಮ್ಮ ನಿಲುವು ಎಂದು ಸ್ಪಷ್ಟಪಡಿಸಿದರು.

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳ ವರದಿಯನ್ನೂ ಡಿಕೆಶಿ ಪ್ರಸ್ತಾಪಿಸಿದರು. ಆಯೋಗದ ಮೂವರು ಸದಸ್ಯರಲ್ಲಿ ಇಬ್ಬರು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಅವರು ಆಗ್ರಹಿಸಿದರು.

ಚುನಾವಣಾ ಆಯೋಗದ ಪ್ರತಿಕ್ರಿಯೆ ಏನು?

ಆದರೆ, ಚುನಾವಣಾ ಆಯೋಗವು ಈ ಆರೋಪಗಳಿಗೆ ಪ್ರತಿಕ್ರಿಯಿಸಿ, ಬಹುಸದಸ್ಯ ಸಂಸ್ಥೆಯಲ್ಲಿ ಆಂತರಿಕ ಚರ್ಚೆಯ ವೇಳೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಆಯೋಗ ಹೊರಡಿಸಿದ ಆದೇಶಗಳು ಪೂರ್ಣ ಆಯೋಗದ ಸರ್ವಾನುಮತದ ನಿರ್ಧಾರಗಳಾಗಿವೆ ಎಂದು ECI ಸ್ಪಷ್ಟಪಡಿಸಿದೆ. SIRಗೆ ಸಂಬಂಧಿಸಿದ ನಿರ್ಧಾರಗಳಲ್ಲೂ ಆಯೋಗದೊಳಗೆ ಒಮ್ಮತವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read