ಹೊಸದಿಗಂತ ಬೆಳಗಾವಿ:
ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಅವರ ಮೇಲೆ ನಡೆದ ಅಮಾನವೀಯ ಹಲ್ಲೆ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಬೆಳಗಾವಿ ಬಿಜೆಪಿ ಮಹಿಳಾ ಮೋರ್ಚಾದಿಂದ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಐತಿಹಾಸಿಕ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ನೂರಾರು ಮಹಿಳಾ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ನಂತರ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, “ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆ. ರಾಜಕೀಯ ದ್ವೇಷಕ್ಕಾಗಿ ಮಹಿಳೆಯರ ಮೇಲೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಲು ಪೊಲೀಸರಿಗೆ ಕುಮ್ಮಕ್ಕು ನೀಡುತ್ತಿರುವ ಈ ಸರ್ಕಾರಕ್ಕೆ ಮಾನ-ಮರ್ಯಾದೆ ಇಲ್ಲ” ಎಂದು ಕಟುವಾಗಿ ಟೀಕಿಸಿದರು.
ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, “ದಲಿತ ಶಾಸಕಿಗೆ ಮತ್ತು ಮಹಿಳಾ ಕಾರ್ಯಕರ್ತರಿಗೆ ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾಧ. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಇದ್ದಾರೆಯೇ ಹೊರತು ಗೂಂಡಾಗಿರಿ ಮಾಡುವುದಕ್ಕಲ್ಲ. ಈ ಘಟನೆಗೆ ಕಾರಣರಾದ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಮತ್ತು ಗೃಹ ಸಚಿವರು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಅರವಿಂದ್ ಪಾಟೀಲ, ಮುಖಂಡರಾದ ಎಂ.ಬಿ. ಝರಲಿ, ಉಜ್ವಲಾ ಬಡವನಾಚೆ ಸೇರಿದಂತೆ ನೂರಾರು ಬಿಜೆಪಿ ಪದಾಧಿಕಾರಿಗಳು ಹಾಗೂ ಮಹಿಳಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

