ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಮುರುಘಾ ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಜುಲೈ 25 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಭೆಯ ಯಶಸ್ಸಿಗಾಗಿ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮರ್ಪಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿರುವ ಈ ಸಭೆಗೆ, ಬೆಂಗಳೂರು ವಿಭಾಗದ ೯ ಜಿಲ್ಲೆಗಳ ಸಚಿವರು, ಶಾಸಕರು ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಇದರೊಂದಿಗೆ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಒಟ್ಟು ೩೦೦ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಈಗಾಗಲೇ ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಇಂತಹ ವಿಭಾಗ ಮಟ್ಟದ ಸಭೆಗಳು ಯಶಸ್ವಿಯಾಗಿ ನಡೆದಿವೆ. ನಮ್ಮ ಜಿಲ್ಲೆಯಲ್ಲೂ ಈ ಸಭೆಯನ್ನು ಯಶಸ್ವಿಯಾಗಿ ನಡೆಸಲು ಮುಖ್ಯಮಂತ್ರಿಗಳು ಜವಾಬ್ದಾರಿ ನೀಡಿದ್ದಾರೆ. ಅಧಿಕಾರಿಗಳು ಯಾವುದೇ ಆತಂಕಕ್ಕೆ ಒಳಗಾಗದೆ, ಸಮನ್ವಯತೆಯಿಂದ ಕೆಲಸ ಮಾಡಿ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕು ಎಂದು ಹೇಳಿದರು.
ಇದನ್ನೂ ಓದಿ:
ಚಿತ್ರದುರ್ಗ ಜಿಲ್ಲೆಯು ಈ ಬೃಹತ್ ಸಭೆಗೆ ಆತಿಥ್ಯ ವಹಿಸುತ್ತಿರುವುದರಿಂದ ಸಭೆಯ ವ್ಯವಸ್ಥೆಗಳು ಅಚ್ಚುಕಟ್ಟಾಗಿರಬೇಕು. ಜಿಲ್ಲೆಯ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ವರದಿಯು ಅತ್ಯಂತ ನಿಖರವಾಗಿ ಹಾಗೂ ಉತ್ತಮ ಮಟ್ಟದಲ್ಲಿರಬೇಕು. ಸಭೆಗೆ ಆಗಮಿಸುವ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಶಿಷ್ಠಾಚಾರದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿಯೇ ಎಲ್ಲಾ ಜಿಲ್ಲೆಗಳ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಬಾರಿ ಬರ ಪರಿಸ್ಥಿತಿ ಎದುರಾಗಿರುವುದಿಂದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕುಡಿಯುವ ನೀರು ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ ನಿಖರ ಅಂಕಿ ಅಂಶಗಳನ್ನು ಅಧಿಕಾರಿಗಳು ನೀಡಬೇಕು. ಇದರೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಇಲಾಖೆಗಳು ಯೋಜನೆಗಳ ಸಂಪೂರ್ಣ ಮಾಹಿತಿ ಒದಗಿಸಬೇಕು. ಬೆಂಗಳೂರಿಗೆ ಮಾಹಿತಿ ಕಳುಹಿಸುವ ಮುನ್ನ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಒಂದು ದಿನ ಮುಂಚಿತವಾಗಿಯೇ ಆಗಮಿಸುವ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಹಾಗೂ ನಗರದ ಪ್ರಮುಖ ಹೋಟೆಲ್‌ಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಮುಂಚಿತವಾಗಿಯೇ ಬೆಂಗಳೂರಿನ ಕೇಂದ್ರ ಕಚೇರಿಗಳಿಂದ ಆಗಮಿಸುವ ಹಿರಿಯ ಅಧಿಕಾರಿಗಳ ಮಾಹಿತಿ ಪಡೆದು ಜಿಲ್ಲಾಡಳಿತಕ್ಕೆ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ.ಸಿಇಓ ಡಾ.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿ.ಪಂ.ಸಿಪಿಓ ಗಾಯತ್ರಿ, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ.ಮಹೇಶ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ದಿವಾಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.



