ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ದಿನವಾದ ಬುಧವಾರದಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು, ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿತ್ತು.
ರಥೋತ್ಸವಕ್ಕೂ ಮುನ್ನ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕ ವೃಂದದವರು ದೇಗುಲದ ಗರ್ಭಗುಡಿಯಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ತೇರಿನ ಬಳಿ ಧಾರ್ಮಿಕ ವಿಧಿ ವಿಧಾನ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಉತ್ಸವ ಮೂರ್ತಿ ಇರಿಸಿ ಬೂದು ಕುಂಬಳಕಾಯಿ ದೃಷ್ಟಿ ತೆಗೆದು ಮಹಾಮಂಗಳಾರತಿ ಹಾಗೂ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಬೆಲ್ಲದ ಆರತಿ ಬೆಳಗಲಾಯಿತು. ಬಳಿಕವಷ್ಟೇ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ: ಲಕ್ಷಾಂತರ ಭಕ್ತರು ಭಾಗಿ

