ಡಿಕೆಶಿಗೆ ಶುರುವಾಗಿದೆಯಾ ಭಯ?: ಡಿ.ಕೆ. ಸುರೇಶ್‌ ನಾಮಪತ್ರ ಸಲ್ಲಿಸಿದ ಹಿಂದಿನ ಕಾರಣವೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ರಾಜ್ಯ ಚುನಾವಣೆಗೆ ಎಲ್ಲಾ ಪಕ್ಷಗಳು ಸಕಲ ಸಿದ್ಧತೆ ನಡೆಸುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೇರಲು ಸರ್ಕಸ್ ನಡೆಸುತ್ತಿದೆ.

ಡಿ.ಕೆ. ಶಿವಕುಮಾರ್‌ ಅವರು ಈಗಾಗಲೇ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಐ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಹೋಗಿರುವ ಹಿನ್ನೆಲೆಯಲ್ಲಿ ಅವರ ಅರ್ಜಿ ಅನೂರ್ಜಿತ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಡಿಕೆಶಿ ಸಹೋದರ ಸಂಸದ ಡಿ.ಕೆ. ಸುರೇಶ್‌ ಕೂಡ ಇಂದು ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿತ್ತು. ಈ ಮಧ್ಯೆ ಮಧ್ಯಂತರ ತಡೆಯನ್ನು ರದ್ದು ಮಾಡುವಂತೆ ಸಿಬಿಐ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿಯನ್ನು ಹೈಕೋರ್ಟ್ ಕೈಗೆತ್ತಿಕೊಳ್ಳದ ಹಿನ್ನೆಲೆ ತನಿಖೆಗೆ ನೀಡಿರುವ ಮಧ್ಯಂತರ ತಡೆ ಆದೇಶವನ್ನು ರದ್ದು ಮಾಡುವಂತೆ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಡಿಕೆ ಶಿವಕುಮಾರ್ 2013 ರಿಂದ 2018ರ ವರೆಗೆ ಸುಮಾರು 75 ಕೋಟಿ ರೂಪಾಯಿ ಅಕ್ರಮ ಆಸ್ತಿಗಳಿಕೆ ಮಾಡಿದ್ದಾರೆ ಎಂದು ಎಫ್ಐಆರ್‌ನಲ್ಲಿ ಸಿಬಿಐ ಉಲ್ಲೇಖಿಸಿತ್ತು.

ಕಳೆದ ಎರಡು ವರ್ಷಗಳಿಂದ ಸಿಬಿಐ ನಡೆಸಿರುವ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಈ ಹಂತದಲ್ಲಿ ತನಿಖೆಗೆ ತಡೆ ನೀಡಿರುವುದು ಸುಪ್ರೀಂಕೋರ್ಟ್‌ನ ನಿಯಮಗಳಿಗೆ ವಿರುದ್ಧ ಎಂದು ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ದಾಖಲಾಗಿದ್ದು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ತಡೆ ಸಿಕ್ಕಿದ್ದರಿಂದ ಚುನಾವಣೆ ಹೊತ್ತಲ್ಲಿ ಡಿ.ಕೆ.ಶಿವಕುಮಾರ್‌ಗೆ ದೊಡ್ಡ ರಿಲೀಫ್ ಸಿಕ್ಕಿತ್ತು.

ಈ ಮಧ್ಯೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಡಿ.ಕೆ.ಶಿವಕುಮಾರ್‌ಗೆ ಶಾಕ್ ಕೊಡಲು ಮುಂದಾಗಿದೆ. 2019ರಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ಕ್ರಮವನ್ನೂ ಡಿ.ಕೆ.ಶಿವಕುಮಾರ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ನ ಬೇಸಿಗೆ ಕಾಲದ ರಜೆ ಮುಕ್ತಾಯವಾದ ನಂತರ ಈ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!