ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭೆ ಚುನಾವಣೆಯ ಕಾವು ಹೆಚ್ಚಾಗಿದ್ದು, ಇದೇ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಗೆಲುವಿಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದರೆ, ಇತ್ತ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮೂಲದ ಮತದಾರರನ್ನು ಗುರಿಯಾಗಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತಯಾಚನೆ ಮಾಡಿದ್ದಾರೆ.
ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮನವಿ:
ಬೆಂಗಳೂರು ಹಾಗೂ ರಾಜ್ಯದಾದ್ಯಂತ ವಿವಿಧ ಕಂಪನಿ, ಉದ್ಯಮಗಳು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಹಾರಿ ಮತದಾರರು ತಮ್ಮ ತಾಯ್ನಾಡಿಗೆ ತೆರಳಿ ಮತದಾನ ಮಾಡಲು ಅನುಕೂಲವಾಗುವಂತೆ ಡಿಕೆ ಶಿವಕುಮಾರ್ ಅವರು ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಎಸ್, ಚುನಾವಣೆಯಲ್ಲಿ ಭಾಗವಹಿಸಲು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಬೇಕು ಎಂದು ಎಲ್ಲಾ ಸಂಸ್ಥೆಗಳನ್ನು ವಿನಂತಿಸಿದ್ದಾರೆ. “ಈ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್‌ಗೆ ಈ ಚುನಾವಣೆ ಮಹತ್ವದ ಪಾತ್ರ:
243 ಸ್ಥಾನಗಳಿಗೆ ನಡೆಯುತ್ತಿರುವ ಈ ಬಿಹಾರ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಪಾತ್ರ ವಹಿಸಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಪ್ರಮುಖ ರಾಜಕಾರಣಿಗಳು ಸಹ ಬಿಹಾರ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.
ಮೊನ್ನೆ ಭಾನುವಾರ, ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್‌ನಲ್ಲಿ ಬೆಂಗಳೂರು ನಿವಾಸಿಗಳ ಬಿಹಾರ ಮೂಲದ ಸಂಘದ ಸದಸ್ಯರನ್ನು ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ, ಬಿಹಾರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಒಳಗೊಂಡಿರುವ ಮಹಾಘಟಬಂಧನ್ ಗೆ ಮತ ನೀಡುವಂತೆ ಮನವಿ ಮಾಡಿದರು. ಅಲ್ಲದೇ, ತಮ್ಮ ಸಂಬಂಧಿಕರಿಗೂ ಮಹಾಘಟಬಂಧನ್ ಪರವಾಗಿ ಮತ ಚಲಾಯಿಸುವಂತೆ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಿಹಾರಿ ಸಮುದಾಯಕ್ಕಾಗಿ ಸಮುದಾಯ ಭವನವೊಂದನ್ನು ನಿರ್ಮಿಸಿಕೊಡುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದು, ಇದು ಬೆಂಗಳೂರಿನಲ್ಲಿರುವ ಬಿಹಾರಿ ಮತದಾರರನ್ನು ಸೆಳೆಯುವ ಪ್ರಯತ್ನವಾಗಿದೆ.

