ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎಂದು ನಾವು ಸುಮ್ಮನೆ ಹೇಳಿಕೊಂಡು ಓಡಾಡಿಲ್ಲ, ಈ ಮಾತು ಸತ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಮ್ಮ ರಾಜ್ಯಕ್ಕೆ ಬರಬೇಕಿದ್ದ ಬರ ಪರಿಹಾರದ ವಿಳಂಬದ ಬಗ್ಗೆ ಒಪ್ಪಿಕೊಂಡಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸಾರ್ವತ್ರಿಕ ಚುನಾವಣೆ ಘೋಷಣೆಯಿಂದ ಕರ್ನಾಟಕಕ್ಕೆ ಬರ ಪರಿಹಾರ ಹಣ ವಿಳಂಬವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಬರ ಪರಿಹಾರ ವಿಳಂಬವಾಗಿದೆ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಚುನಾವಣೆಗೂ ಪರಿಹಾರ ಕೊಡೋದಕ್ಕೋ ಏನು ಸಂಬಂಧ? ನಮಗಂತೂ ಇದು ಅರ್ಥವಾಗಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯದ ಬಗ್ಗೆ ಜನರಿಗೆ ಅರಿವಿದೆ. ನಾವು ನಾಲ್ಕು ತಿಂಗಳ ಹಿಂದೆಯೇ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ, ನಾವು ಮನವಿ ಮಾಡಿದ ನಾಲ್ಕು ತಿಂಗಳು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿಲ್ಲ. ಈಗ ಅವರು ನೀತಿ ಸಂಹಿತೆಯ ನೆಪ ನೀಡುತ್ತಿದ್ದಾರೆ. ಕೊಡಬೇಕು ಎಂದು ಮನಸ್ಸು ಮಾಡಿದ್ದರೆ, ಜನರ ಕಷ್ಟಕ್ಕೆ ಸ್ಪಂದಿಸುವ ಮನಸ್ಸಿದ್ದರೆ ಮಾರ್ಗ ತಾನಾಗೆಯೇ ಕಾಣುತ್ತದೆ ಎಂದು ಹೇಳಿದ್ದಾರೆ.