ಹೊಸದಿಗಂತ ವರದಿ ಬೆಳಗಾವಿ:
ಬರಗಾಲದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ಪರಿಸ್ಥಿತಿಯನ್ನು ಬ್ಯಾಂಕ್‌ಗಳು ಅರ್ಥಮಾಡಿಕೊಂಡು ಮಾನವೀಯ ನೆಲೆಯಲ್ಲಿ ಸ್ಪಂದಿಸಬೇಕು. ಸಾಲ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು. ವಸೂಲಾತಿ ಹೆಸರಿನಲ್ಲಿ ರೈತರಿಗೆ ಅನಗತ್ಯ ಕಿರುಕುಳ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ 2026-27ನೇ ಸಾಲಿನ ತೃತೀಯ ತ್ರೈಮಾಸಿಕ ಜಿಲ್ಲಾ ಸಮಾಲೋಚನಾ ಸಮಿತಿ (ಡಿಸಿಸಿ) ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರಗಾಲದ ಪರಿಣಾಮ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಬ್ಯಾಂಕ್‌ಗಳು ಸಾಲ ವಸೂಲಾತಿಗೆ ಒತ್ತಡ ಹೇರುವುದು ಸೂಕ್ತವಲ್ಲ. ರೈತರಿಗೆ ಹಂತ ಹಂತವಾಗಿ ಸಾಲ ಮರುಪಾವತಿಸಲು ಅವಕಾಶ ಕಲ್ಪಿಸಬೇಕು. ಮುಂದಿನ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹೊಸ ಬೆಳೆ ಸಾಲ ಮಂಜೂರು ಮಾಡಲು ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಬೇಕು. ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವ ಆರ್ಥಿಕವಾಗಿ ಹಿಂದುಳಿದವರಿಗೆ ಸಾಲ ಸೌಲಭ್ಯ ಕಲ್ಪಿಸಬೇಕು. ಅರ್ಹರ ಅರ್ಜಿಗಳನ್ನು ವಿನಾಕಾರಣ ತಿರಸ್ಕರಿಸದೆ ಆದ್ಯತೆ ಮೇರೆಗೆ ಸಾಲ ಮಂಜೂರು ಮಾಡಬೇಕು ಎಂದರು.
ಗ್ರಾಮೀಣ ಪ್ರದೇಶಗಳ ಕೃಷಿ ಚಟುವಟಿಕೆ ಹಾಗೂ ಆರ್ಥಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸಮೀಕ್ಷೆ ನಡೆಸಬೇಕು. ಬ್ಯಾಂಕಿಂಗ್ ಸೇವೆಗಳ ಅಗತ್ಯವಿರುವ ಪ್ರದೇಶಗಳಲ್ಲಿ ಹೊಸ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು. ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವುದರೊಂದಿಗೆ ಸಿಬ್ಬಂದಿ ಗ್ರಾಹಕರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂದು ನಿರ್ದೇಶನ ನೀಡಿದರು.
ಅರ್ಜಿ ತಿರಸ್ಕರಿಸಿದರೆ ಕ್ರಮ:
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸುವಲ್ಲಿ ಬ್ಯಾಂಕ್‌ಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ವಿನಾಕಾರಣ ನೆಪ ಹೇಳಿ ಸಾಲದ ಅರ್ಜಿಗಳನ್ನು ತಿರಸ್ಕರಿಸುವುದು ಅಥವಾ ವಿಳಂಬ ಮಾಡುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಬೇಕು. ಭಾಷೆಯ ಕಾರಣದಿಂದ ಗ್ರಾಹಕರಿಗೆ ಸಂವಹನದ ಸಮಸ್ಯೆ ಎದುರಾಗಬಾರದು. ಈ ಕುರಿತು ಎಲ್ಲ ಬ್ಯಾಂಕ್ ಅಧಿಕಾರಿಗಳು ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಹಣಕಾಸು ಯೋಜನೆ ಸ್ಯಾಚುರೇಶನ್ ಅಭಿಯಾನ ಹಾಗೂ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರಚಾರ ಪತ್ರಗಳನ್ನು ಸಂಸದ ಜಗದೀಶ್ ಶೆಟ್ಟರ್ ಮತ್ತು ಸಿಇಒ ರಾಹುಲ್ ಶಿಂಧೆ ಬಿಡುಗಡೆ ಮಾಡಿದರು.



