ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಬಿಗ್ ರಿಲೀಫ್ ನೀಡಿದ್ದಾರೆ. ಮಾತ್ರವಲ್ಲ ಸಾಕ್ಷ್ಯಾಧಾರಗಳ ಕೊರೆತೆ ಎಂದು ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಇದರಿಂದ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ವಿರುದ್ಧ ಫುಲ್ ಗರಂ ಆಗಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ನೇಹಮಯಿ ಕೃಷ್ಣ ನೀಡಿದ ದೂರಿನಲ್ಲಿ ಆರೋಪ ಸಂಖ್ಯೆ 1 ರಿಂದ 4 ರವರೆಗಿನ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲ ಮತ್ತು ಕೆಲವು ಪ್ರಕರಣಗಳು ವಜಾಗೊಂಡಿದೆ. ಇದು ಸಿವಿಲ್ ಸ್ವರೂಪದ ಪ್ರಕರಣವಾಗಿದ್ದು ಲೋಕಾಯುಕ್ತ ತನಿಖೆ ನಡೆಸುವಂತಿಲ್ಲ ಎಂದು ಲೋಕಾಯುಕ್ತ ಎಸ್‌ಪಿ ಉದೇಶ್ ನೋಟಿಸ್ ನಲ್ಲಿ ತಿಳಿಸಿದ್ದಾರೆ. ಒಂದು ವೇಳೆ ಇದಕ್ಕೆ ವಿರೋಧವಿದ್ದರೆ ಒಂದು ವಾರದೊಳಗೆ ನ್ಯಾಯಾಧೀಶರ ಮುಂದೆ ಹಾಜರಾಗಿ ತಿಳಿಸುವಂತೆಯೂ ಸೂಚಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊದಲಿನಿಂದಲೂ ಈ ಪ್ರಕರಣದ ಸರಿಯಾಗಿ ತನಿಖೆ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದೆ, ಈಗ ಸಾಕ್ಷ್ಯಾಧಾರಗಳ ಕೊರತೆ ಎಂದು ಬಿ ರಿಪೋರ್ಟ್ ಹಾಕಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಷ್ಟೊಂದು ದಾಖಲೆಗಳಿದ್ದರೂ ಸಾಕ್ಷ್ಯಾಧಾರಗಳ ಕೊರತೆ ಎಂದು ಹೇಳುತ್ತಿರುವುದು ಸರಿಯಲ್ಲ. 10 ನೇ ತರಗತಿ ಪಾಸಾದ ನನಗೆ ಕಾನೂನಿನ ಅರಿವಿರುವಷ್ಟು ಲೋಕಾಯುಕ್ತ ಅಧಿಕಾರಿಗಳಿಗೆ ಇಲ್ಲವೇ? ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬವನ್ನು ರಕ್ಷಿಸಲು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಗಿಯುವ ಮುನ್ನವೇ ವರದಿ ಸಲ್ಲಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ನನಗೆ ಕಾನೂನು ಅರಿವಿರುವಷ್ಟು ಲೋಕಾಯುಕ್ತ ಅಧಿಕಾರಿಗಳಿಗೆ ಇಲ್ಲವೇ, ಲೋಕಾಯುಕ್ತ ಅಧಿಕಾರಿಗಳು ಸಿಎಂ ಹೇಳಿದಂತೆ ಮಾಡಿದ್ದಾರೆ. ಅಷ್ಟೊಂದು ದಾಖಲೆ ಕೊಟ್ಟಿದ್ರು ಕೂಡ ಸಾಕ್ಷಿಗಳ ಕೊರತೆ ಅಂತ ಹೇಳಿದ್ದಾರೆ. ತನಿಖೆ ಮುಗಿಯುವ ಮುನ್ನವೇ ವರದಿ ಸಲ್ಲಿಕೆಗೆ ಮುಂದಾಗಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಸಾಮಾನ್ಯ ಜ್ಞಾನ ಇಲ್ಲ ಅಂದ್ರೆ ಏನರ್ಥ ಎಂದು ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ಕಿಡಿಕಾರಿದ್ದಾರೆ.