Sunday, October 26, 2025

ವೈದ್ಯೆ ಆತ್ಮಹತ್ಯೆ ಪ್ರಕರಣ: ರೇಪ್‌ ಆರೋಪಿ ಪಿಎಸ್‌ಐ ಪೊಲೀಸರಿಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಸತಾರದಲ್ಲಿ ನಡೆದ ವೈದ್ಯೆಯ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಶನಿವಾರ ಸಂಜೆ ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ ಸ್ವಯಂ ಶರಣಾಗಿದ್ದಾನೆ. ಇದೇ ವೇಳೆ ಪ್ರಕರಣದ ಮತ್ತೊಬ್ಬ ಆರೋಪಿಯಾದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್‌ನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿದ ಯುವ ವೈದ್ಯೆಯ ಅಂಗೈಯಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ಪಿಎಸ್‌ಐ ಬದ್ನೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಮತ್ತು ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಇಬ್ಬರ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಪಿಎಸ್‌ಐ ಬದ್ನೆಯ ವಿರುದ್ಧದ ಆರೋಪಗಳು ಗಂಭೀರ ಸ್ವರೂಪ ಪಡೆದಿದ್ದರಿಂದ ತನಿಖೆ ಆರಂಭವಾಗುತ್ತಿದ್ದಂತೆಯೇ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಯಿತು. ಈ ನಡುವೆ, ಸಂತ್ರಸ್ತೆಯ ಮರಣೋತ್ತರ ವರದಿಯನ್ನು ಬದಲಾಯಿಸಲು ರಾಜಕೀಯ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಮೃತ ವೈದ್ಯೆಯ ಕುಟುಂಬ ಮತ್ತು ಸ್ಥಳೀಯರು ಆರೋಪಿಗಳಿಗೆ ಕಠಿಣ ಶಿಕ್ಷೆ, ಮರಣದಂಡನೆ ವಿಧಿಸಲು ಆಗ್ರಹ ವ್ಯಕ್ತಪಡಿಸಿದ್ದಾರೆ.

error: Content is protected !!