ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ದೇಶಾದ್ಯಂತ ವೈದ್ಯರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ನಿಲ್ಲಿಸಲಿ ನೀಡಿರುವ ಕರೆಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ.
ಇದರ ನಡುವೆ ಸಾರ್ವಜನಿಕರ ಹಿತದೃಷ್ಟಿಯಿಂದ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಪ್ರತಿಭಟನಾನಿರತ ವೈದ್ಯರಲ್ಲಿ ಮನವಿ ಮಾಡಿದೆ.
ಭಾರತೀಯ ವೈದ್ಯಕೀಯ ಸಂಘದ ಮನವಿಯಂತೆ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು ಸಮಿತಿಯನ್ನು ರಚಿಸುವುದಾಗಿ ಸಚಿವಾಲಯ ಭರವಸೆ ನೀಡಿದೆ. ಸಮಿತಿಗೆ ತಮ್ಮ ಸಲಹೆಗಳನ್ನು ನೀಡಲು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದೂ ತಿಳಿಸಿದೆ.
ಆರೋಗ್ಯ ಸಚಿವಾಲಯ ಹೇಳಿದ್ದೇನು?
ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ಸ್ (FORDA), ಭಾರತೀಯ ವೈದ್ಯಕೀಯ ಸಂಘ (IMA) ಮತ್ತು ದೆಹಲಿಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (Resident Doctors’ Associations of Government Medical Colleges and Hospitals in Delhi)ನ ಪ್ರತಿನಿಧಿಗಳ ಬೇಡಿಕೆಗಳನ್ನು ಆಲಿಸಿದ್ದೇವೆ. ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ. 26 ರಾಜ್ಯಗಳು ಈಗಾಗಲೇ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಜಾರಿಗೆ ತಂದಿವೆ ಎಂದೂ ತಿಳಿಸಿದೆ. ಹೀಗಾಗಿ ಕೂಡಲೇ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದೆ.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನನ್ನು ಒದಗಿಸುತ್ತಿದ್ದಾರೆ.