ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಭಟನೆಗಳನ್ನು ವರದಿ ಮಾಡುವ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುರಕ್ಷತೆಯ ಕುರಿತ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪತ್ರಕರ್ತರ ಗುರುತಿನ ಕುರಿತು ಮಹತ್ವದ ಪ್ರಶ್ನೆ ಎತ್ತಿದೆ.
ಮೊಬೈಲ್ ಹೊಂದಿರುವ ಪ್ರತಿಯೊಬ್ಬರೂ ಪತ್ರಕರ್ತರೆಂದು ಹೇಳಿಕೊಳ್ಳಲು ಆರಂಭಿಸಿದರೆ ತುಂಬಾ ಸಮಸ್ಯೆಗಳು ಎದುರಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು, ದೆಹಲಿಯಲ್ಲಿ ಪ್ರತಿಭಟನೆಗಳನ್ನು ವರದಿ ಮಾಡುತ್ತಿದ್ದ ಸ್ವತಂತ್ರ ಹಾಗೂ ಫ್ರೀಲಾನ್ಸ್ ಪತ್ರಕರ್ತರನ್ನು ಪೊಲೀಸರು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಮಾನ್ಯತೆ ಹೊಂದಿಲ್ಲ ಎಂಬ ಕಾರಣಕ್ಕೆ ಗುರುತಿಸಲು ನಿರಾಕರಿಸುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಪತ್ರಕರ್ತರೆಂದು ಗುರುತಿಸಿಕೊಳ್ಳಲು ಅರ್ಹರಾದವರನ್ನು ಇತರರಿಂದ ಪ್ರತ್ಯೇಕಿಸುವುದು ಮತ್ತು ಅವರ ಹಕ್ಕುಗಳನ್ನು ರಕ್ಷಿಸುವುದು ಹೇಗೆ ಎಂಬ ಪ್ರಶ್ನೆಯನ್ನು ಪರಿಶೀಲಿಸಬೇಕಿದೆ ಎಂದಿತು. ಸಂವಿಧಾನದ 19ನೇ ವಿಧಿಯಡಿ ಪ್ರತಿಯೊಬ್ಬ ನಾಗರಿಕನಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿರುವ ಹಿನ್ನೆಲೆಯಲ್ಲಿ, ಪತ್ರಕರ್ತರ ಗುರುತಿನ ವ್ಯಾಪ್ತಿ ಮತ್ತು ರಕ್ಷಣೆಯ ಮಾನದಂಡಗಳ ಕುರಿತು ವಿವರವಾದ ಪರಿಶೀಲನೆ ಅಗತ್ಯವಿದೆ ಎಂದು ನ್ಯಾಯಮೂರ್ತಿ ಬಾಗ್ಚಿ ಅಭಿಪ್ರಾಯಪಟ್ಟರು.
ಪತ್ರಕರ್ತರು ಯಾರು?, ರೀಲ್ಸ್ ಮಾಡುವವರು ಯಾರು?
ಇದೇ ವೇಳೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಡಿಜಿಟಲ್ ಯುಗದಲ್ಲಿ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವವರೂ ತಮ್ಮನ್ನು ಪತ್ರಕರ್ತರೆಂದು ಕರೆದುಕೊಳ್ಳುತ್ತಿದ್ದಾರೆ ಎಂದು ವಾದಿಸಿದರು. ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುವವರಲ್ಲಿ ಸ್ವತಂತ್ರ ಪತ್ರಕರ್ತರು ಯಾರು, ಕೇವಲ ರೀಲ್ಸ್ ಮಾಡುವವರು ಯಾರು ಎಂಬುದನ್ನು ಗುರುತಿಸುವುದು ಕಷ್ಟವೆಂದರು. ಆದಾಗ್ಯೂ, ಮಹಿಳಾ ಪತ್ರಕರ್ತರು ಸೇರಿದಂತೆ ಯಾರೊಂದಿಗೂ ಅನುಚಿತವಾಗಿ ವರ್ತಿಸಬಾರದು ಎಂದು ಹೇಳಿದರು.
ಮಹಿಳಾ ಪತ್ರಕರ್ತೆಗೆ ಕಿರುಕುಳ ಆರೋಪ
ಪ್ರತಿಭಟನೆಗಳನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯೊಬ್ಬರು ಪೊಲೀಸ್ ಅಧಿಕಾರಿಯಿಂದ ಕಿರುಕುಳ ಎದುರಿಸಿದ ಆರೋಪಕ್ಕೆ ಸಂಬಂಧಿಸಿದ ಅರ್ಜಿಯನ್ನೂ ನ್ಯಾಯಾಲಯ ಪರಿಶೀಲಿಸಿತು. ಆಕೆಯ ದೂರಿನ ಮೇರೆಗೆ ಎಫ್ಐಆರ್ ದಾಖಲಿಸದೆ, ಬದಲಾಗಿ ಆಕೆಯ ವಿರುದ್ಧವೇ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರತಿ ದೂರು ದಾಖಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಗಳು ಗಂಭೀರವಾಗಿವೆ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ, ತನಿಖೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು



