ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ದಕ್ಷಿಣ ಕನ್ನಡದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಎಫ್‌ಐಆರ್ ಮತ್ತು ಈ ಸಂಬಂಧ ಪುತ್ತೂರು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಬಿಳಿನೆಲೆ ಗ್ರಾಮದ ಯುವಕರಾದ ಕೀರ್ತನ್ ಕುಮಾರ್ ಹಾಗೂ ಎನ್.ಎಂ.ಸಚಿನ್ ಕುಮಾರ್ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295-ಎ ಅಡಿ ಪ್ರಕರಣ ದಾಖಲಿಸಲಾಗಿದೆ. ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವೇ ದುರುದ್ದೇಶಪೂರ್ವಕವಾಗಿ ಕೆರಳಿಸುವ ಕೃತ್ಯವನ್ನು ಐಪಿಸಿ ಸೆಕ್ಷನ್ 295-ಎ ಹೇಳುತ್ತದೆ. ಆದರೆ, ಯಾರಾದರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಅದು ಇನ್ಯಾವುದೋ ವರ್ಗದ ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂದು ಅರ್ಥವಾಗುತ್ತಿಲ್ಲ ಎಂದು ಕೋರ್ಟ್ ಹೇಳಿದೆ.