July 4, 2026
Saturday, July 4, 2026
spot_img

ರಾಮ ಮಂದಿರದ ಬೆನ್ನಲ್ಲೇ ಬದರಿನಾಥದಲ್ಲೂ ದೇಣಿಗೆ ಹಗರಣ? ತನಿಖಾ ಸಮಿತಿ ರಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ, ಇದೀಗ ಪ್ರಸಿದ್ಧ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಲಾಗಿದೆ.

ತನಿಖಾ ಸಮಿತಿ ರಚನೆ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೇಣಿಗೆ ದುರುಪಯೋಗದ ಆರೋಪಗಳನ್ನು ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ (BKTC) ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಮಾಹಿತಿ ನೀಡಿರುವ ಸಮಿತಿಯ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು, ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ವಿಶೇಷ ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಿಬ್ಬಂದಿಗೆ ನೋಟಿಸ್ ಜಾರಿ

ಆರೋಪಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಸಂಬಂಧಪಟ್ಟ ಸಿಬ್ಬಂದಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದ್ದು, ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇದೇ ವೇಳೆ, ಆರೋಪ ಎದುರಿಸುತ್ತಿರುವ ವ್ಯಕ್ತಿ ತಮ್ಮ ‘ವೈಯಕ್ತಿಕ ಕಾರ್ಯದರ್ಶಿ’ ಎಂಬ ವದಂತಿಯನ್ನು ಅಧ್ಯಕ್ಷರು ತಳ್ಳಿಹಾಕಿದ್ದಾರೆ. ಆತ ಕೇವಲ ದೇವಸ್ಥಾನ ಸಮಿತಿಯ ಸಾಮಾನ್ಯ ನೌಕರ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಠಿಣ ಕಾನೂನು ಕ್ರಮದ ಎಚ್ಚರಿಕೆ

ಬಿಕೆಟಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಹನ್ ಸಿಂಗ್ ರಂಗದ್ ಮಾತನಾಡಿ, “ಲಭ್ಯವಿರುವ ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಂಬಂಧಪಟ್ಟವರ ಹೇಳಿಕೆಗಳ ಆಧಾರದ ಮೇಲೆ ತನಿಖೆ ನಡೆಯಲಿದೆ. ವರದಿಯಲ್ಲಿ ಆರೋಪಗಳು ಸಾಬೀತಾದರೆ ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಸಿದ್ದಾರೆ. ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಸಮಿತಿ ಮುಂದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !