ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಯಶ್ ಈ ವರ್ಷವೂ ತಮ್ಮ ಅಭಿಮಾನಿಗಳಿಗೆ ಬೇಸರದ ಸುದ್ದಿ ನೀಡಿದ್ದಾರೆ. ಹೊಸ ವರ್ಷಕ್ಕೆ ಶುಭ ಹಾರೈಸಿದ ನಟ ಯಶ್ ತಮ್ಮ ಹುಟ್ಟುಹಬ್ಬಕ್ಕೆ ಯಾರನ್ನು ಭೇಟಿ ಮಾಡಲು ಆಗುವುದಿಲ್ಲ ಎಂದು ಪ್ರೀತಿಯಿಂದಲೇ ಹೇಳಿದ್ದಾರೆ.
ತಮ್ಮ ಹುಟ್ಟುಹಬ್ಬಕ್ಕೆ ಇನ್ನು ಕೆಲವೇ ದಿನಗಳು ಇರುವಾಗ ಸೋಶಿಯಲ್ ಮೀಡಿಯಾ ಮೂಲಕ ಅವರು ಯಾವುದೇ ಆಡಂಬರ ಇಲ್ಲದೇ ತಮ್ಮ ಜನ್ಮದಿನವನ್ನು ಆಚರಿಸುವಂತೆ ಅಭಿಮಾನಿಗಳ ಬಳಿ ಕೇಳಿಕೊಂಡಿದ್ದಾರೆ.
‘ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿ ಇರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಫ್ಲೆಕ್ಸ್, ಬ್ಯಾನರ್ಗಳ ಯಾವುದೇ ಆಡಂಬರ ಮಾಡದೇ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೇ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ’ ಎಂದು ಯಶ್ ಪೋಸ್ಟ್ ಮಾಡಿದ್ದಾರೆ.
‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ, ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ’ ಎಂದು ಯಶ್ ಅವರು ಎಲ್ಲರಿಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.