ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬೆಂಬಲ ಸೂಚಿಸಿದ್ದಾರೆ.
ಪರೀಕ್ಷಾ ಲೋಪಗಳಿಗೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿರುವ ಯುವಕರ ಬೇಡಿಕೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.
ಯುವಕರನ್ನು ನಿರ್ಲಕ್ಷಿಸಬೇಡಿ
ಉದ್ಧವ್ ಠಾಕ್ರೆ ಅವರ ಸಂದೇಶವನ್ನು ಪಕ್ಷದ ನಾಯಕ ಸಂಜಯ್ ರಾವತ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಮತ್ತು ಯುವಕರು ತೀವ್ರ ಬಿಸಿಲಿನ ನಡುವೆಯೂ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಧ್ವನಿಯನ್ನು ಕಡೆಗಣಿಸುವುದು ಸರಿಯಲ್ಲ ಎಂದು ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.
ಪರೀಕ್ಷಾ ಅಕ್ರಮಗಳಿಂದ ಭವಿಷ್ಯಕ್ಕೆ ಹೊಡೆತ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳಿಗೆ ಧಕ್ಕೆಯಾಗಿದೆ. ಇದೇ ಕಾರಣದಿಂದ ಪ್ರತಿಭಟನೆಗಳು ತೀವ್ರಗೊಂಡಿವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ಜಂತರ್ ಮಂತರ್‌ನಲ್ಲಿ ಭಾರಿ ಪ್ರತಿಭಟನೆ
ಶನಿವಾರ ನಡೆದ ಪ್ರತಿಭಟನೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಪೋಷಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಕ್ಕಾಗಿ ಅವರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಆನ್‌ಲೈನ್‌ನಿಂದ ಬೀದಿಗೆ ಬಂದ ಆಕ್ರೋಶ
ನೀಟ್, ಸಿಯುಇಟಿ, ಸಿಬಿಎಸ್‌ಇ ಪರೀಕ್ಷೆಗಳು ಮತ್ತು ಎಸ್‌ಎಸ್‌ಸಿ ನೇಮಕಾತಿ ಪ್ರಕ್ರಿಯೆಗಳಲ್ಲಿನ ಅಕ್ರಮದ ಆರೋಪಗಳ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ ಅಭಿಯಾನ ಈಗ ಪ್ರತಿಭಟನೆಯ ರೂಪ ಪಡೆದುಕೊಂಡಿದೆ.



