ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೊಸೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ಗುರುವಾರ (ಸೆ.11) ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂರು ದಿನದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಪವಿತ್ರಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರ್.ಆರ್.ನಗರದಲ್ಲಿರುವ ಎಸ್.ನಾರಾಯಣ್ ನಿವಾಸದಲ್ಲಿ ಮಹಜರು ನಡೆಸಿದ್ದಾರೆ. ಜೊತೆಗೆ ಮಹಜರು ವೇಳೆ ಎಸ್.ನಾರಾಯಣ್ ಹಾಗೂ ಕುಟುಂಬಸ್ಥರಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇನ್ನೂ ದೂರು ನೀಡಿರುವ ಪವಿತ್ರಾ ಅವರಿಗೂ ಕೂಡ ಪೊಲೀಸರು ನೋಟಿಸ್ ನೀಡಿದ್ದು, ದೂರಿನಲ್ಲಿ ಉಲ್ಲೇಖಿಸಿದಂತೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ತಿಳಿಸಿದ್ದಾರೆ.