ಸ್ಯಾಂಡಲ್ ವುಡ್ ನಲ್ಲಿ ಛಾಪು ಮೂಡಿಸಿತ್ತು ಡಾ .ರಾಜ್​ಕುಮಾರ್​, ಲೀಲಾವತಿ ಜೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ.ಅವರ ಅಗಲಿಕೆಯ (Leelavathi Death) ಸುದ್ದಿ ತಿಳಿದು ಅಭಿಮಾನಿಗಳು, ಆಪ್ತರು ಕಂಬನಿ ಮಿಡಿದಿದ್ದಾರೆ.

ಲೀಲಾವತಿ ಕನ್ನಡದಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ.

ಲೀಲಾವತಿ ಅವರ ಚಿತ್ರ ಜೀವನ
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಹಾಗೆಯೇ ಡಾ. ರಾಜ್ ಕುಮಾರ್ ಅವರೊಂದಿಗೆ ರಣಧೀರ ಕಂಠೀರವ ಚಿತ್ರದ ಮೂಲಕ ಈ ಜೋಡಿ ಸಿನಿಮಾ ರಂಗದಲ್ಲಿ ಛಾಪು ಮೂಡಿಸಿತು .

ಬಳಿಕ ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು.

ಹೀಗೆಯೇ ಹಲವು ಚಿತ್ರಗಳಲ್ಲಿ ನಟಿಸುತ್ತಾ ಮೆಚ್ಚಿನ ನಟಿಯಾಗಿದ್ದ ಲೀಲಾವತಿ ೭೦ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾಗಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!