ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಸುಧಾ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ರಾಜ್ಯದ ಸಾಂವಿಧಾನಿಕ ಹುದ್ದೆಯ ಜವಾಬ್ದಾರಿ ಅವರ ಹೆಗಲೇರಿದೆ.
ನಿರ್ಗಮಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಿದ್ದರು. ಕರ್ನಾಟಕದ ರಾಜ್ಯಪಾಲರ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈ ಹಿಂದೆ ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ:
ಡಾ. ಸುಧಾ ಯಾದವ್ ಜೀವನ
ಸುಧಾ ಯಾದವ್ ಅವರ ಸಾರ್ವಜನಿಕ ಜೀವನದ ಪಯಣದ ಹಿಂದೆ ವೈಯಕ್ತಿಕ ದುರಂತದ ಕಥೆಯೂ ಇದೆ. 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಗಡಿ ಭದ್ರತಾ ಪಡೆಯ ಉಪ ಕಮಾಂಡೆಂಟ್ ಆಗಿದ್ದ ಅವರ ಪತಿ ಸುಖ್ಬೀರ್ ಸಿಂಗ್ ಯಾದವ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟಿದ್ದರು. ಮರಣೋತ್ತರವಾಗಿ ಅವರಿಗೆ ಸೇನಾ ಪದಕ ನೀಡಿ ಗೌರವಿಸಲಾಗಿತ್ತು. ಪತಿಯ ಸಾವಿನ ಬಳಿಕ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ ಸುಧಾ ಯಾದವ್, 1999ರಲ್ಲಿ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ 2004ರವರೆಗೆ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದರು.
ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್
ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದಿರುವ ಅವರು ರೂರ್ಕಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಚಿನ್ನದ ಪದಕವನ್ನೂ ಗಳಿಸಿದ್ದರು. ಭಾರತೀಯ ಜನತಾ ಪಕ್ಷದಲ್ಲಿ ಹಲವು ಸಂಘಟನಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 2022ರಲ್ಲಿ ಬಿಜೆಪಿಯ ಸಂಸದೀಯ ಮಂಡಳಿಗೆ ಸೇರ್ಪಡೆಯಾಗಿದ್ದರು.
ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು, ಶಾಸಕರು, ಸಂಸದರು, ನ್ಯಾಯಮೂರ್ತಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



