ಹೊಸದಿಗಂತ ವರದಿ ಗದಗ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಹಾಗೂ ಶಾಸಕ ಡಾ.ಚಂದ್ರು ಲಮಾಣಿ ನಡುವೆ ಮಾತಿನ ವಾಗ್ವಾದ ನಡೆಯಿತು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಪೂರೈಕೆ, ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿಬಿಜಿ–ರಾಮ್ ಜಿ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಈ ವೇಳೆ ಅಧಿಕಾರಿಗಳು ಸಚಿವರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ಷೇಪ ವ್ಯಕ್ತಪಡಿಸಿದರು.
ಶಿರಹಟ್ಟಿ ಮತಕ್ಷೇತ್ರದ 37 ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ಶಾಸಕರು ಸಭೆಯ ಗಮನಕ್ಕೆ ತಂದರು. ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಮರೆಮಾಚಿ ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಶಾಸಕರ ಆರೋಪಗಳಿಗೆ ಅಧಿಕಾರಿಗಳು ಸಮರ್ಥನೆ ನೀಡಿದ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ ಕೂಡ ಅಧಿಕಾರಿಗಳ ಪರವಾಗಿ ಮಾತನಾಡಿದರು. ಸಭೆಯ ನಡುವೆ ಮಧ್ಯಪ್ರವೇಶಿಸಿ ಮಾತನಾಡುವ ಅಗತ್ಯವಿಲ್ಲ. ಸಮಸ್ಯೆಗಳಿದ್ದರೆ ಕೆಡಿಪಿ ಸಭೆಯಲ್ಲಿ ಚರ್ಚಿಸಿ ಅಥವಾ ಲಿಖಿತ ರೂಪದಲ್ಲಿ ಪತ್ರ ನೀಡಿ. ಸಮಸ್ಯೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವರು ಹೇಳಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಚಂದ್ರು ಲಮಾಣಿ, ಸಭೆಗೆ ಆಹ್ವಾನಿಸಿದ ಬಳಿಕ ಸಮಸ್ಯೆಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು. ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದರೂ ಅವರ ಮಾತನ್ನೇ ಕೇಳುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಖಂಡ್ರೆ, “ನಾನು ಇಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ಮಾಡಲು ಬಂದಿದ್ದೇನೆ. ನೀವು ಹೇಳುವುದನ್ನಾಗಲಿ, ಅಧಿಕಾರಿಗಳು ಹೇಳುವುದನ್ನಾಗಲಿ ಕೇಳಲು ಬಂದಿಲ್ಲ. ಸಮಸ್ಯೆ ಇದ್ದರೆ ಬಗೆಹರಿಸುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಸಂಬಂಧಿಸಿದ ಅಧಿಕಾರಿಗಳಿಂದ ವಿಸ್ತೃತ ವರದಿ ಸಲ್ಲಿಸುವಂತೆ ಸೂಚಿಸುತ್ತೇನೆ. ಲಿಖಿತ ರೂಪದಲ್ಲಿ ಪತ್ರ ನೀಡಿ, ಪರಿಶೀಲಿಸಿ ಕ್ರಮ ಜರುಗಿಸುತ್ತೇವೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರು ಮತ್ತು ಶಾಸಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಸಭೆಯಲ್ಲಿ ಅಧಿಕಾರಿಗಳ ಮಾಹಿತಿ ಹಾಗೂ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಪ್ರಮುಖ ಚರ್ಚೆಯ ವಿಷಯವಾಗಿತ್ತು.



