ಹೊಸದಿಗಂತ ವರದಿ, ಮಡಿಕೇರಿ:
ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮದ ವತಿಯಿಂದ ಆಯೋಜಿಸಲಾಗಿರುವ ಕಾವೇರಿ ನದಿ ಉತ್ಸವಕ್ಕೆ ಮುಂಜಾನೆ ತಲಕಾವೇರಿ ಕ್ಷೇತ್ರದಲ್ಲಿ ಗಣಪತಿ ಮತ್ತು ಈಶ್ವರ ಮಂದಿರ ಹಾಗೂ ಬ್ರಹ್ಮಕುಂಡಿಕೆ ಬಳಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಇದೇ ಸಂದರ್ಭ ಕಾವೇರಿ ನದಿ ಸಂರಕ್ಷಣೆ ಕುರಿತ ಕರಪತ್ರಗಳನ್ನು ಬಿಡುಗಡೆ ಮಾಡಿ, ಕಾವೇರಿ ನದಿ ಸಂರಕ್ಷಣೆ ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.
ನಂತರ ಭಾಗಮಂಡಲದ ಭಗಂಡೇಶ್ವರ ಕ್ಷೇತ್ರದಲ್ಲಿ ಪೂಜೆ ಬಳಿಕ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಜೀವನದಿ ಕಾವೇರಿಗೆ ಮಂತ್ರಘೋಷಗಳೊಂದಿಗೆ ಮಹಾ ಆರತಿ ಬೆಳಗಿ, ನಾಗರಿಕರಿಗೆ ನದಿ ಸಂರಕ್ಷಣೆ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ.ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ದಕ್ಷಿಣ ಭಾರತದ ಸಾಧುಸಂತರು, ಸ್ವಾಮೀಜಿಗಳು ಈ ಸಂದರ್ಭ ಹಾಜರಿದ್ದರು.