Sunday, December 28, 2025

ಡ್ರಗ್ಸ್ ಮಾಫಿಯಾ ರಾಜ್ಯದಲ್ಲಿ ಭಯಾನಕ ರೂಪ ಪಡೆದುಕೊಳ್ಳುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದಿನೇದಿನೇ ಭಯಾನಕ ರೂಪ ಪಡೆದುಕೊಳ್ಳುತ್ತಿದ್ದರೂ, ಅದನ್ನು ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಟೀಕೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಹಾರಾಷ್ಟ್ರ ಪೊಲೀಸರು ನಡೆಸಿದ ಇತ್ತೀಚಿನ ಡ್ರಗ್ಸ್ ವಿರೋಧಿ ಕಾರ್ಯಾಚರಣೆಯೇ ರಾಜ್ಯ ಸರ್ಕಾರದ ಅಸಮರ್ಥತೆಗೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಮಾಡಿ, ಸರ್ಕಾರದ ನಿರ್ಲಕ್ಷ್ಯದಿಂದಾಗಿ ಯುವಜನತೆಯ ಭವಿಷ್ಯ ಅಪಾಯದಲ್ಲಿದೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ ಹಿಂದೆ 390 ಕೋಟಿ ರೂ. ಮೌಲ್ಯದ ಮೆಫೆಡ್ರೋನ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು, ಇದೀಗ ಬೆಂಗಳೂರಿನಲ್ಲಿ 56 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆಹಚ್ಚಿರುವುದನ್ನು ಉಲ್ಲೇಖಿಸಿ, ಕರ್ನಾಟಕದ ಪೊಲೀಸ್ ಮತ್ತು ಗುಪ್ತಚರ ವ್ಯವಸ್ಥೆ ನಿಷ್ಕ್ರಿಯವಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಹೊರರಾಜ್ಯದ ಪೊಲೀಸರು ಬಂದು ಇಲ್ಲಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ರಾಜ್ಯದ ಕಾನೂನು ಸುವ್ಯವಸ್ಥೆಯ ಕುಸಿತವನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಡ್ರಗ್ಸ್ ದಂಧೆ ಕುರಿತು ಕೇಳಿದ ಪ್ರಶ್ನೆಗೆ ಗೃಹ ಸಚಿವರು ನೀಡಿದ ಉತ್ತರ ಬೇಜವಾಬ್ದಾರಿಯುತವಾಗಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ. ಸರ್ಕಾರ ತಕ್ಷಣ ಎಚ್ಚೆತ್ತು ದಂಧೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ, ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

error: Content is protected !!