ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 242 ಭ್ರೂಣ ಹತ್ಯೆ ಮಾಡಿದ್ದಾರೆ ಹಾಗೂ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆಸಿರುವುದು ತಿಳಿದು ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಆರೋಪಿಗಳು ಒಂದೂವರೆ ಸಾವಿರಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.ಆರೋಪಿಗಳ ಪೈಕಿ ಭ್ರೂಣ ಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು ತಂಡ ಕೆಲಸ ಮಾಡಿದ್ದು, ಆರೋಪಿಗಳ ಕರೆ ವಿವರಗಳನ್ನು ಕಲೆಹಾಕಿದಾಗ ವೈದ್ಯರು ಸೇರಿದಂತೆ ಅನೇಕರ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ ಎಂದು ಹೇಳಿದರು.
ಪ್ರಕರಣದಲ್ಲಿ ಇಲ್ಲಿಯವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರೆಲ್ಲರೂ ಮೂಲತಃ ಮೈಸೂರು ಹಾಗೂ ಮಂಡ್ಯದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್ಯದ ಆಲೆಮನೆ, ಮೈಸೂರು ಹಾಗೂ ಬೆಂಗಳೂರಿನ ಬೈಯಪ್ಪನಹಳ್ಳಿಯ ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದರು. ಮಧ್ಯವರ್ತಿಗಳ ಮೂಲಕ ಮಹಿಳೆಯರನ್ನು ಕರೆ ತರಲಾಗುತ್ತಿತ್ತು. ಒಂದು ಭ್ರೂಣ ಹತ್ಯೆಗೆ 20 ಸಾವಿರ ರೂಪಾಯಿನಂತೆ ಪಡೆದು ಕೃತ್ಯ ಎಸಗುತ್ತಿದ್ದರು ಎಂದು ಮಾಹಿತಿ ನೀಡಿದರು.